

ತರೀಕೆರೆ: ಕ್ಷೇತ್ರದ ಸಮಗ್ರ ಕಲ್ಯಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ತರಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಅಜ್ಜಂಪುರ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕೋಟ್ಯಾಂತರ ರೂ. ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರಿಟ್ ರಸ್ತೆ, ಚರಂಡಿ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಅಜ್ಜಂಪುರದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್‌ಭವನ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಕಳೆದ ಐದಾರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಅಜ್ಜಂಪುರ ತಾಲೂಕು ಅಭಿವೃದ್ಧಿಯತ್ತ ಮುಖ ಮಾಡಿದೆ. ಗ್ರಾಮೀಣ ಪ್ರದೇಶಗಳು ಮಾತ್ರವಲ್ಲ, ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದೆ. ಅನುದಾನದ ಲಭ್ಯತೆ ಅನುಸಾರ ಪಟ್ಟಣದ ಪ್ರಗತಿಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದರು.
ಕೆಪಿಸಿಸಿ ಸದಸ್ಯ ಜಿ.ನಟರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಪ್ರಮುಖರಾದ ಕೆ.ರಾಘವೇಂದ್ರ, ತಿಪ್ಪೇಶ್ ಮಡಿವಾಳ್,ಮಂಜುನಾಥ ಮತ್ತಿತರರಿದ್ದರು.