ವಸತಿ ರಹಿತರಿಗೆ ನಿವೇಶನ ಮಂಜೂರು ಮಾಡಲು ಒತ್ತಾಯ

21 ckm 2 radha sundaresh
ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಎಸ್.ಎಲ್.ರಾಧಾ ಸುಂದರೇಶ್ ಮಾತನಾಡಿದರು.
Published on

ಚಿಕ್ಕಮಗಳೂರು: ವಸತಿ ಮತ್ತು ನಿವೇಶನ ರಹಿತರಿಗೆ ಕೂಡಲೇ ನಿವೇಶನ ಮಂಜೂರು ಮಾಡಿ ಮನೆಗಳನ್ನು ನಿರ್ಮಿಸಿ ಕೊಡುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ ಸೆ. 25ರಂದು ಚಿಕ್ಕಮಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಸ್.ಎಲ್.ರಾಧಾ ಸುಂದರೇಶ್ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11:30ಕ್ಕೆ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ಮೈದಾನದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ತಿಳಿಸಿದರು.
ನಿವೇಶನ ರಹಿತರಿಗೆ ನಿವೇಶನವನ್ನು ಹಂಚುವ ಹಾಗೂ ಮನೆಗಳನ್ನು ನಿರ್ಮಿಸಿ ಕೊಡುವ ಕೆಲಸವನ್ನು ಕೂಡಲೇ ಪ್ರಾರಂಭಿಸಬೇಕು. ನಿವೇಶನ ಹಂಚಿಕೆಗೆ ಅಗತ್ಯವಿರುವ ಸರ್ಕಾರಿ ಭೂಮಿಯನ್ನು ಕಾಯ್ದಿರಿಸಲು ಕಂದಾಯ ಇಲಾಖೆಗೆ ಕೂಡಲೇ ಸೂಚನೆ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ವಸತಿ ಮತ್ತು ನಿವೇಶನ ರೈತರನ್ನು ಗುರುತಿಸಲು ನಿರಂತರವಾಗಿ ಸಮೀಕ್ಷಾ ಕಾರ್ಯ ಕೈಗೊಳ್ಳಬೇಕು. ಇವರಿಗೆ ನಗರಸಭೆ ಪುರಸಭೆ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಜೊತೆಗೆ ಅಂದೇ ಸ್ಥಳೀಯ ಗ್ರಾಮ ಪಂಚಾಯಿತಿಗಳ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ವಿದ್ಯುತ್ ಇಲ್ಲದೆ ತಿಂಗಳುಗಳೆ ಕಳೆದಿದೆ. ಹೀಗಾಗಿ ಕೇಬಲ್ ಮೂಲಕ ವಿದ್ಯುತ್ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಪಡಿತರ ಚೀಟಿ ಮಾಡಿಸಲು ಕೂಡಲೇ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲೆಯಾದ್ಯಂತ ಒತ್ತುವರಿ ಭೂಮಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, 25 ಎಕರೆ ಒಳಗಿನ ಒತ್ತುವರಿಯನ್ನು ತೆರವುಗೊಳಿಸಬಾರದು ಎಂದು ಪ್ರತಿಭಟನೆ ವೇಳೆ ಒತ್ತಾಯಿಸಲಾಗುವುದು ಎಂದರು.
ಚಿಕ್ಕಮಗಳೂರು ನಗರಸಭೆಯಿಂದ ವಸತಿ ರಹಿತರಿಗೆ ಫ್ಲಾಟ್ ನೀಡಲು ಅರ್ಜಿ ಆಹ್ವಾನಿಸಿ ಹಣವನ್ನು ಕಟ್ಟಿಸಿಕೊಳ್ಳಲಾಗಿದೆ. ಆದರೆ ಇದುವರೆಗೆ ಯಾರಿಗೂ ಫ್ಲ್ಯಾಟ್ ವಿತರಣೆ ಮಾಡಿಲ್ಲ. ಕೂಡಲೇ ಫ್ಲಾಟ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಆ. 28 ರಂದು ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಿಪಿಐ ರಾಜ್ಯ ಮಂಡಳಿ ಸದಸ್ಯ ಎಚ್.ಎಂ.ರೇಣುಕಾರಾಧ್ಯ, ಪ್ರಮುಖರಾದ ಜಿ.ರಘು, ಕೆರೆಮಕ್ಕಿ ರಮೇಶ್, ರಮೇಶ್ ಕೆಳಗೂರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net