

ಬೆಳಗಾವಿ: ಶಿಕ್ಷಣವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಹೇಳಿದರು.
ನಗರದಲ್ಲಿ ಈಚೆಗೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾಯ್ದೆ ಅನುಷ್ಠಾನ ಕುರಿತು ಪ್ಯಾನ್ ಇಂಡಿಯಾ ಕ್ಯಾಂಪ್ ಜಾಗೃತಿ ಅಭಿಯಾನಕ್ಕೆ ಚನ್ನಮ್ಮ ವೃತ್ತ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಅನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು
ತಿಳಿಸಿದರು.
ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ. ನಾಗರಾಜ, ಉಪ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ, ಬಾಲಕಾರ್ಮಿಕ ಯೋಜನಾ ಸಂಸ್ಥೆ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ಪ್ರವೀಣ ಇತರರಿದ್ದರು.