ಅಭಿಯೋಜನೆಗೆ ಅನುಮತಿ ನೀಡಿದ್ದಕ್ಕೆ ಖಂಡನೆ

18-HNL-2 KURI HINDU
Published on

ಹಾನಗಲ್ಲ: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ರಂಜನಿ ಟಾಕೀಸ್ ವೃತ್ತದಿಂದ ತಮಟೆ ಬಾರಿಸುತ್ತ ಪ್ರಮುಖ ಬೀದಿಗಳಲ್ಲಿ ಕುರಿಗಳ ಹಿಂಡಿನೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಮಹಾತ್ಮ ಗಾಂಧಿ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಮಾನವ ಸರಪಳಿ ನಿರ್ವಿುಸಿ, ರಸ್ತೆ ತಡೆ ಕೈಗೊಂಡು ಘೋಷಣೆ ಕೂಗಿ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ‘ರಾಜ್ಯಪಾಲರು ಸಂವಿಧಾನದ ಪ್ರತಿನಿಧಿಯಾಗಿದ್ದರೂ ಬಿಜೆಪಿಯ ಆಣತಿಯಂತೆ ವರ್ತಿಸುತ್ತಿದ್ದಾರೆ. ಕೂಡಲೇ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕರೆಯಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಮಂಜು ಗೊರಣ್ಣನವರ, ಶಹರ ಅಧ್ಯಕ್ಷ ಮಹ್ಮದ್​ವುತೀನ್ ಶಿರಬಡಗಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವು ಭದ್ರಾವತಿ, ಶಿವು ತಳವಾರ ಸೇರಿ ಪುರಸಭೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಶಾಸಕ ಮಾನೆ ಪ್ರತಿಕ್ರಿಯೆ
ರಾಜಕೀಯಪ್ರೇರಿತ ನಿರ್ಧಾರದ ಮೂಲಕ ರಾಜ್ಯಪಾಲರು ಸಂವಿಧಾನದ ಮೌಲ್ಯವನ್ನು ಗಾಳಿಗೆ ತೂರುತ್ತಿದ್ದಾರೆ. ನಾವೆಲ್ಲ ಸಿದ್ದರಾಮಯ್ಯ ಪರವಾಗಿ ನಿಲ್ಲಲಿದ್ದೇವೆ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net