

ಮಡಿಕೇರಿ: ಆ೧೨ ರಿಂದ ೨೫ ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸಂಬಂಧ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸುವುದು, ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಮೇಲುಸ್ತುವಾರಿ ಹಾಗೂ ಮಾರ್ಗದರ್ಶನ ನೀಡಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಮತ್ತು ಸಮೀಪವಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಬೇಕು. ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪರೀಕ್ಷಾ ಕಾರ್ಯಗಳಿಗೆ ಅಗತ್ಯವಿರುವ ವಾಹನ ಸೌಕರ್ಯಗಳನ್ನು ಒದಗಿಸಲು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ಮಾತನಾಡಿ, ೨೦೨೨ ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ ಮತ್ತು ಮಡಿಕೇರಿ ಆಯಾಯ ತಾಲೂಕು ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಒಟ್ಟು ೧,೧೮೨ ವಿದ್ಯಾರ್ಥಿಗಳು ಬರೆಯಲಿದ್ದು, ಅದರಲ್ಲಿ ೭೧೪ ವಿದ್ಯಾರ್ಥಿಗಳು, ೪೬೮ ವಿದ್ಯಾರ್ಥಿನೀಯರು ಹಾಗೂ ೫೮೪ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು, ೫೯೮ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ೪೧೯ ವಿದ್ಯಾರ್ಥಿಗಳು ಕಲಾ ವಿಭಾಗದಿಂದ, ೬೦೨ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಿಂದ ಮತ್ತು ೧೬೧ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಿಂದ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜ್ಯೋತಿ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬೆಳ್ಳಿಯಪ್ಪ ಇತರರು ಇದ್ದರು.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಆ ೧೨ ರಿಂದ ೨೫ ರವರೆಗೆ ನಡೆಯುವ ಆಗಸ್ಟ್ ೨೦೨೨ ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ.