

ಮಡಿಕೇರಿ: ಮೇ೨೦ ಮತ್ತು ೨೧ ರಂದು ನಡೆಯುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮೇ೨೦ ಮತ್ತು ೨೧ ರಂದು ಬೆಳಗ್ಗೆ ೧೦.೩೦ ಯಿಂದ ೧೧.೫೦ ಗಂಟೆವರೆಗೆ ಮತ್ತು ಮಧ್ಯಾಹ್ನ ೨.೩೦ ರಿಂದ ೩.೫೦ ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ. ಸಿಇಟಿ ಪರೀಕ್ಷೆಯು ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ೭೨೨ ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆ ೨೪೦ ವಿದ್ಯಾರ್ಥಿಗಳು, ಸಂತ ಜೋಸೆಫರ ಶಾಲೆ ೩೧೨ ವಿದ್ಯಾರ್ಥಿಗಳು ಒಟ್ಟು ೧೨೭೪ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಇರಬೇಕು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು ಮಾಹಿತಿ ನೀಡಿ, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ಅಥವಾ ತೆಗೆದುಕೊಂಡು ಹೋಗುವಂತಿಲ್ಲ. ಕ್ಯಾಲ್ಕುಲೇಟರ್ ಅಥವಾ ಲಾಗ್ ಟೇಬಲ್‌ಗಳನ್ನು ಪರೀಕ್ಷಾ ಸಮಯದಲ್ಲಿ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಹಾಗೆಯೇ ಪರೀಕ್ಷಾ ಕೊಠಡಿ ಒಳಗೆ ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು(ಮೊಬೈಲ್ ಪೋನ್, ಬ್ಲೂ ಟೂತ್, ಸ್ಲೈಡ್ ರೂಲ್ಸ್, ಕ್ಯಾಲ್ಕುಲೇಟರ್, ವೈಟ್ ಪ್ಲೂಯಿಡ್, ವೈಯರ್ ಲೆಸ್ ಸೆಟ್ಸ್ ಮತ್ತಿತರ) ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ವಿಜಯ, ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ರಾಣಿ, ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆಂಥೋನಿ, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ತಹಶೀಲ್ದಾರ್ ಕಿರಣ್ ಗೌರಯ್ಯ, ಇತರರು ಪರೀಕ್ಷೆ ಸಂಬಂಧ ಹಲವು ಮಾಹಿತಿ ನೀಡಿದರು.