ಕನ್ನಡ ರಾಜ್ಯೋತ್ಸವ ಅಚ್ಚುಕಟ್ಟಾಗಿ ನಡೆಸಿ: ವೆಂಕಟ್ ರಾಜಾ

kannada rajyothsava
Published on

ಮಡಿಕೇರಿ: ನ.೧ ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.


ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ಹೆಚ್ಚಿನ ಮಳೆ ಆಗಿರುವುದರಿಂದ ಮರಳು ಅಳವಡಿಸಿ ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು.


ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‌ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂಬಂಧ ಹಾಡುಗಳನ್ನು ಒಳಗೊಂಡಿರಬೇಕು ಎಂದು ಸಲಹೆ ಮಾಡಿದರು.


ಸಾಂಸ್ಕೃತಿಕ ಕಾಯಕ್ರಮ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವ ತಯಾರಿಯನ್ನು ವೀಕ್ಷಿಸಿ ಸರಿಯಾದದ್ದನ್ನು ಆಯ್ಕೆ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂದರ್ಭಕ್ಕೆ ತಕ್ಕಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.


ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ ಮತ್ತು ವೇದಿಕೆ, ಪಥ ಸಂಚಲನ, ಸಾಂಸ್ಕೃತಿಕ, ಉಪಾಹಾರ, ಬಹುಮಾನ, ಸ್ವಚ್ಚತೆ ಹಾಗೂ ಕುಡಿಯುವ ನೀರು ಹೀಗೆ ವಿವಿಧ ಉಪ ಸಮಿತಿಗಳು ತಮ್ಮ ತಮ್ಮ ಹಂತದಲ್ಲಿ ಸಮಾಲೋಚನೆ ನಡೆಸಿ ಅ.೨೫ ರೊಳಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಿವಿಧ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಗೌರವಿಸುವಂತಾಗಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.


ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲರೂ ಶ್ರಮಿಸಬೇಕು. ಕನ್ನಡ ಮಯ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.


ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಪಥ ಸಂಚಲನ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಜಿಲ್ಲಾಡಳಿತದ ಜೊತೆ ಸದಾ ಕೈಜೋಡಿಸಲಿದೆ ಎಂದು ಹೇಳಿದರು.


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವತಯಾರಿ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.


ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ಆರ್.ಶೆಟ್ಟಿ, ಜಿ.ಪಂ.ಎಂಜಿನಿಯರ್ ಜಿ.ಕೆ.ನಾಯಕ್, ಡಿವೈಎಸ್‌ಪಿ ಮಹೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುಳ, ಡಾ.ಮಧುಸೂದನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಅನಿತಾ ಭಾಸ್ಕರ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net