ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

25mdk07
Published on

ಮಡಿಕೇರಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಮತ್ತು ಬಿಜೆಪಿ ಸರ್ಕಾರಿ ಯಂತ್ರವನ್ನು ದುರುಪಯೋಗ ಪಡಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ನೇತೃತ್ವದಲ್ಲಿ ಇಂದಿರಾ ಗಾಂಧಿ ವೃತ್ತದಲ್ಲಿ ನಡೆಸಲಾದ ಪ್ರತಿಭಟನೆ ವೇಳೆ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಡಿಸಿಸಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಳೆದ ೮ ವರ್ಷಗಳಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅಧಿಕಾರದ ದರ್ಪ ಕಂಡುಬರುತ್ತಿದೆ. ಯಾರಿಗೂ ಗಟ್ಟಿಯಾಗಿ ಧ್ವನಿ ಎತ್ತಲು ಕೂಡ ಆಗುತ್ತಿಲ್ಲ. ಪತ್ರಿಕಾ ರಂಗವೂ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅಡ್ಡಿಯಾಗಿದೆ. ರಾಹುಲ್ ಗಾಂಧಿ ೩೬೦೦ ಕಿಮೀ ಪಾದಯಾತ್ರೆ ಪೂರ್ಣಗೊಳಿಸಿರುವುದನ್ನು ಸಹಿಸಲು ಸಾಧ್ಯವಾಗದೆ ಅವರನ್ನು ದೇಶದ ರಾಜಕೀಯದಿಂದ ದೂರ ಇಡಬೇಕು ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ಈ ಕ್ರಮ ತೆಗೆದುಕೊಂಡಿದೆ ಎಂದು ಆರೋಪಿಸಿದರು.

ಹೈಕೋರ್ಟ್ ಹಿರಿಯ ವಕೀಲರೂ ಆಗಿರುವ ಪಕ್ಷದ ಮುಖಂಡ ಹೆಚ್.ಎಸ್. ಚಂದ್ರಮೌಳಿ ಮಾತನಾಡಿ, ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದು ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಿದೆ. ಇದು ತಾತ್ಕಾಲಿಕ ಹಿನ್ನಡೆಯಷ್ಟೇ. ರಾಹುಲ್ ಗಾಂಧಿ ಮುಂದೆ ಇನ್ನೂ ೩ ಕೋರ್ಟ್‌ಗಳಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶಗಳಿದೆ ಎಂದರು.

ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಮಾತನಾಡಿ, ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯ ಕಗ್ಗೊಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಾಲಯದ ಆದೇಶ ಪ್ರತಿ ಸಿಗುವುದಕ್ಕಿಂತ ಮೊದಲೇ ಸರಕಾರ ಹೇಗೆ ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನಿಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಸಭೆ ಸದಸ್ಯ ರಾಜೇಶ್ ಯಲ್ಲಪ್ಪ, ವಿರಾಜಪೇಟೆ ಪುರಸಭೆ ಸದಸ್ಯ ಮತೀನ್, ಪಕ್ಷದ ಪ್ರಮುಖರಾದ ಟಿ.ಪಿ. ರಮೇಶ್, ತೆನ್ನೀರ ಮೈನಾ, ಮಿನಾಜ್ ಪ್ರವೀಣ್, ಕೂಡಿಗೆ ಅಣ್ಣಯ್ಯ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net