

ಮಂಡ್ಯ: ಅಭಿವೃದ್ಧಿ ವಿಚಾರದಲ್ಲಿ ನಾವು ಎಂದಿಗೂ ರಾಜೀ ಮಾಡಿಕೊಳ್ಳುವುದಿಲ್ಲ. ಸರ್ಕಾರದ ಒಳ್ಳೆಯ ಕಾರ್ಯಗಳನ್ನು ಬೆಂಬಲಿಸಬೇಕು. ತಪ್ಪುಗಳಿದ್ದಲ್ಲಿ ಸಲಹೆ ಕೊಟ್ಟರೆ ಅದನ್ನು ನಾವು ಸ್ವೀಕಾರ ಮಾಡಿ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡರ ಶತಮಾನೋತ್ಸವ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಪತ್ರಕರ್ತರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೂರ್ವಾಗ್ರಹ ಪೀಡಿತರಾಗಿ ಹಾಗೂ ದ್ವೇಷದ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿಯ ಕಡೆಗೆ ಮುಖ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪತ್ರಕರ್ತರು ತಮ್ಮ ಆತ್ಮಸಾಕ್ಷಿಗನುಗುಣವಾಗಿ ಕೆಲಸ ಮಾಡಬೇಕು ಎಂದರು.
ನಮ್ಮ ಸರ್ಕಾರ ಬಂದು ಕೇವಲ ಎರಡು ತಿಂಗಳಾಗಿದೆ. ಇಷ್ಟು ಕಡಿಮೆ ಅವಧಿಯಲ್ಲಿ ಎಲ್ಲ ಕಾರ್ಯಗಳಿಗೂ ವೇಗ ನೀಡಿದ್ದೇವೆ. ಇದಕ್ಕೆ ಕೆಲವರು ಅಪಸ್ವರ ಎತ್ತುತ್ತಿರುವುದು ಸರಿಯಲ್ಲ. ಕೆಲಸ ಮಾಡಿದರೂ ಅಪವಾದ, ಮಾಡದಿದ್ದರೂ ಅಪವಾದ ಎಂಬಂತೆ ಬಿಂಬಿಸುವುದು ಸರಿಯಲ್ಲ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಹೆದ್ದಾರಿಗೆ ಅಗತ್ಯವಾಗಿ ಬೇಕಾಗಿರುವ ಸೌಲಭ್ಯಗಳನ್ನು ನೀಡದೆ ಸಾರ್ವಜನಿಕ ಸೇವೆಗೆ ಆತುರಾತುರವಾಗಿ ಲೋಕಾರ್ಪಣೆ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಯಾವುದೇ ಯೋಜನೆ ರೂಪಿಸಬೇಕಾದರೂ ಅದಕ್ಕೆ ಸಂಬಂಧಿಸಿದ ಎಲ್ಲ ಕಾರ್ಯಗಳನ್ನೂ ಪೂರ್ಣಗೊಳಿಸಿದ ಬಳಿಕವಷ್ಟೇ ಸಾರ್ವಜನಿಕ ಸೇವೆಗೆ ಅರ್ಪಿಸಬೇಕು. ಈ ಬಗ್ಗೆ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಎನ್.ಜಯರಾಂ ಮಾತನಾಡಿ, ಪ್ರಸ್ತುತ ಮಾಧ್ಯಮ ನಾಗಾಲೋಟದಲ್ಲಿ ಓಡುತ್ತಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಾಧ್ಯಮವೂ ಪೈಪೋಟಿ ಎದುರಿಸಬೇಕಾಗಿದೆ. ಇಂತಹ ಸಂದರ್ಭದಲ್ಲಿ ಎಲ್ಲ ಮಾಧ್ಯಮಗಳೂ ಅಸ್ಥಿತ್ವ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ. ಆದರೂ ತಪ್ಪು ಮಾಹಿತಿಗಳನ್ನು ನೀಡುವುದು ಸರಿಯಲ್ಲ. ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ವರದಿ ಮಾಡುವುದು ಸೂಕ್ತ ಎಂದು ಸಲಹೆ ನೀಡಿದರು.
ಸರ್ಕಾರದ ಒಳ್ಳೆಯ ಕಾರ್ಯಕ್ರಮಗಳನ್ನೂ ತಿಳಿಸುವುದರ ಜೊತೆಗೆ ಸಾರ್ವಜನಿಕರ ಹಿತರಕ್ಷಣೆಯೂ ಮುಖ್ಯವಾಗಿರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರ ಹಿತರಕ್ಷಣೆಯನ್ನೂ ಸರ್ಕಾರ ಮಾಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಕ್ಷೇತ್ರಕ್ಕೆ ಮುಂದಿನ ಬಜೆಟ್‌ನಲ್ಲಿ 500 ಕೋಟಿ ರೂ ಒದಗಿಸಬೇಕೆಂಬ ಇಚ್ಚೆ ಇದೆ. ಮುಂದಿನ ವರ್ಷಗಳಲ್ಲಿ ಮತ್ತಷ್ಟು ಒಳ್ಳೆಯ ಬೆಳವಣಿಗೆಗಳು ಆಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕಾರ್ಯದರ್ಶಿ ಮತ್ತೀಕೆರೆ ಜಯರಾಂ, ಪತ್ರಕರ್ತ ಪಿ.ಜೆ.ಚೈತನ್ಯಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇತರರಿದ್ದರು.
ಇದೇ ವೇಳೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಉಪಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಪಿ. ತ್ಯಾಗರಾಜು, ಶಾಸಕ ರವಿಕುಮಾರ್ ಗಣಿಗ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸೋಮಶೇಖರ್ ಕೆರಗೋಡು, ಡಿ.ಎಲ್. ಲಿಂಗರಾಜು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.