

ಮಂಡ್ಯ: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಇದೀಗ ಷರತ್ತು ವಿಧಿಸುವ ಮೂಲಕ ಮತದಾರರಿಗೆ ದ್ರೋಹವೆಸಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆರೋಪಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ರಾಜ್ಯದ ಮತದಾರರಿಗೆ ಅಂಗೈಯಲ್ಲಿ ಆಕಾಶ ತೋರಿಸುತ್ತಾ, ಅನೇಕ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತುಗಳಿಲ್ಲದೆ ನೀಡುವ ವಾಗ್ದಾನ ಮಾಡಿತ್ತು. ಅಧಿಕಾರಕ್ಕೆ ಏರುತ್ತಿದ್ದಂತೆ ತಮ್ಮ ಗ್ಯಾರಂಟಿ ಯೋಜನೆಗಳನ್ನು ಸೀಮಿತಗೊಳಿಸಲು ಮುಂದಾಗಿದೆ. ಪ್ರಚಾರ ಸಭೆಗಳಲ್ಲಿ ಸಿದ್ದರಾಮಯ್ಯ ಅವರು ಎಲ್ಲರಿಗೂ ಸೌಲಭ್ಯ ಸಿಗಲಿದೆ ಎಂದಿದ್ದರು. ಆದರೆ ಈಗ ಎಲ್ಲ ಗ್ಯಾರಂಟಿಗಳಿಗೂ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಮತದಾರರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿರುವ ಛತ್ತೀಸ್‌ಘಡ ಹಾಗೂ ರಾಜಸ್ತಾನಗಳಲ್ಲಿ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಯಾವುದನ್ನೂ ಅನುಷ್ಠಾನಗೊಳಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೂ ಬರುವ ಮುನ್ನ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವುದಾಗಿ ವಾಗ್ದಾನ ಮಾಡುವುದರ ಜತೆಗೆ ಸಹಿ ಹಾಕಿದ ಗ್ಯಾರಂಟಿ ಕಾರ್ಡ್‌ಗಳನ್ನೂ ಜನರಿಗೆ ವಿತರಿಸಿದ್ದಾರೆ. ಅದರಲ್ಲಿ ಯಾವುದೇ ಷರತ್ತುಗಳನ್ನೂ ಅಳವಡಿಸಿರಲಿಲ್ಲ. ಆದರೆ ಈಗ ಅಧಿಕಾರಕ್ಕೆ ಬಂದ ಮೇಲೆ ಷರತ್ತುಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಲ್ಲದೆ ಹಿಂದಿನ ಬಿಜೆಪಿ ಸರ್ಕಾರದ ಅಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಎಲ್ಲ ಯೋಜನೆಗಳನ್ನೂ ತಡೆ ಹಿಡಿಯುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಮೈಷುಗರ್‌ನಲ್ಲಿ ಎಥೆನಾಲ್ ಘಟಕ ಸ್ಥಾಪನೆಗೆ ಮೀಸಲಿಟ್ಟ ಅನುದಾನವನ್ನೂ ವಾಪಸ್ ಪಡೆಯುವ ಮೂಲಕ ರೈತ ವಿರೋಧಿ ನಿಲುವನ್ನು ತಾಳಿದೆ. ಇದೇ ಧೋರಣೆ ಮುಂದುವರಿದಲ್ಲಿ ಮುಂಬರುವ ದಿನಗಳಲ್ಲಿ ಮತದಾರರೊಡಗೂಡಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.