ಬಿಜೆಪಿ ಆಡಳಿತದಲ್ಲಿ ಜನರಿಗೆ ಸಂಕಷ್ಟ: ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ ಟೀಕೆ

Shivappa)
Published on

ಮಂಡ್ಯ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಬೆಲೆ ಏರಿಕೆಯಿಂದಾಗಿ ಜನರಿಗೆ ಜೀವನ ನಡೆಸಲು ಕಷ್ಟವಾಗಿದೆ ಎಂದು ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ ಟೀಕಿಸಿದರು.

ತಾಲೂಕಿನ ಉಮ್ಮಡಹಳ್ಳಿ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಹಿಗಳಿರುವ ಕಾಂಗ್ರೆಸ್‌ನ ಭರವಸೆಗಳ ಗ್ಯಾರಂಟಿ ಕಾರ್ಡ್‌ಗಳನ್ನು ಜನರಿಗೆ ವಿತರಿಸಿ ಮಾತನಾಡಿದರು. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜನಸಾಮಾನ್ಯರಿಗೆ ದೊಡ್ಡ ಹೊಡೆತ ಬಿದ್ದಿದೆ. ಆದರೆ ಬೆಲೆ ಇಳಿಕೆ ಮಾಡುವುದನ್ನು ಬಿಟ್ಟು ಬಿಜೆಪಿ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಜೀವನ ಸುಗಮಗೊಳಿಸಲು ವಿವಿಧ ಯೋಜನೆಯನ್ನು ಜಾರಿಗೆ ತರಲಿದೆ. ಅದಕ್ಕೆ ಪೂರಕವಾಗಿ ರಾಜ್ಯದ ಪ್ರತಿ ಕುಟುಂಬದ ಒಬ್ಬರು ಮಹಿಳೆಗೆ ಎರಡು ಸಾವಿರ ರೂ ನೀಡುವ ಗೃಹಲಕ್ಷ್ಮೀ ಯೋಜನೆ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಪಕ್ಷದ ಗ್ಯಾರಂಟಿ ಕಾರ್ಡ್ ಅನ್ನು ಜನರಿಗೆ ನೀಡಲಾಗುತ್ತಿದೆ. ಇದರೊಂದಿಗೆ ಘೋಷಣೆ ಮಾಡಿದಂತೆ ಅಧಿಕಾರ ಬಂದರೆ ಯೋಜನೆ ಜಾರಿಗೊಳಿಸುವುದು ನಮ್ಮ ಬದ್ಧತೆ ಎಂದು ಭರವಸೆ ನೀಡಿದರು.

ಆರ್‌ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net