ರಾಜ್ಯಪಾಲರ ಹುದ್ದೆಗೆ ಕಾಂಗ್ರೆಸ್ ಅಗೌರವ: ಈಶ್ವರಪ್ಪ ಕಿಡಿ

Kse
ಕೆ.ಎಸ್.ಈಶ್ವರಪ್ಪ, ಮಾಜಿ ಡಿಸಿಎಂ
Published on

ಶಿವಮೊಗ್ಗ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅನುಮತಿ ನೀಡಿದ್ದಾರೆ ಎಂಬ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ನವರು ಅರ್ಥಹೀನ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯಪಾಲರ ಹುದ್ದೆಗೆ ಅಗೌರವ ತೋರುತ್ತಿದ್ದಾರೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹರಿಹಾಯ್ದಿದ್ದಾರೆ.

ಕಾಂಗ್ರೆಸ್‌ನವರು ಮಾಡುತ್ತಿರುವ ರಾಜಕೀಯ ಅಸಹ್ಯ ಮೂಡಿಸುತ್ತಿದೆ. ರಾಜ್ಯಪಾಲರ ವಿರುದ್ಧ ರಾಜಭವನ ಚಲೋ ನಡೆಸುವುದು ಎಷ್ಟು ಸರಿ? ರಾಜ್ಯಪಾಲರ ಭಾವಚಿತ್ರವನ್ನು ಸುಟ್ಟುಹಾಕಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರವಲ್ಲವೇ? ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಅವರ ವಿರುದ್ಧ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜ್ಯಪಾಲರ ಬಳಿ ಇವೆ. ಅದಕ್ಕೆ ಅನುಮತಿ ನೀಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡಿದ್ದರು. ಈಗ ಅವರ ಆರೋಪ ಹುಸಿ ಎಂಬುದು ದೃಢಪಟ್ಟಿದೆ. ಸ್ವತಃ ಗೃಹ ಸಚಿವ ಡಾ. ಜಿ.ಪರಮೇಶ್ವರ್ ರಾಜ್ಯಪಾಲರ ಬಳಿ ಯಾವ ಕಡತವೂ ಬಾಕಿ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ ನಾಯಕರ ಹೋರಾಟ ದುರುದ್ದೇಶಪೂರಿತ ಎಂಬುದು ಇದರಿಂದ ದೃಢಪಟ್ಟಿದೆ ಎಂದು ಈಶ್ವರಪ್ಪ ಹೇಳಿದರು.
ರಾಜ್ಯಪಾಲರ ಬಳಿ ಕಾಂಗ್ರೆಸ್ ನಾಯಕರು ತೆರಳಿದ್ದ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರನ್ನು ಹೊರಗೆ ಕಳಿಸಿರುವ ಕ್ರಮ ಸರಿಯಾಗಿದೆ. ಐವಾನ್ ರಾಷ್ಟ್ರದ್ರೋಹದ ಹೇಳಿಕೆ ನೀಡಿದ್ದರು. ವಾಸ್ತವದಲ್ಲಿ ಅವರನ್ನು ಬಂಧಿಸಬೇಕು. ರಾಜ್ಯಪಾಲರ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲ ಕಾಂಗ್ರೆಸ್ ನಾಯಕರು ರಾಜ್ಯದ ಜನರ ಕ್ಷಮೆ ಕೋರಬೇಕೆಂದು ಈಶ್ವರಪ್ಪ ಒತ್ತಾಯಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಲಿಂಗಯ್ಯ ಶಾಸ್ತ್ರಿ, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್, ಪ್ರಮುಖರಾದ ಬಾಲು, ಶಿವಕುಮಾರ್, ಚಿದಾನಂದ, ಶ್ರೀಕಾಂತ್ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net