

ಎನ್.ಆರ್.ಪುರ: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಆರೋಪಿಸಿದರು.
2014ರ ಲೋಕಸಭೆ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದರೆ ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿ, ಅಡಕೆ ಬೆಳೆಗಾರರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಮೌನ ವಹಿಸುತ್ತಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಹಿಂದೆ ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಪಶ್ಚಿಮ ಘಟ್ಟದ ಸಂರಕ್ಷಣೆ ಕುರಿತು ಗಾಡ್ಗೀಳ್ ವರದಿ ನೀಡಿದ್ದರು. ವರದಿಗೆ ಜನರ ಆಕ್ಷೇಪಣೆ ಬಂದಾಗ ತಕ್ಷಣ ವರದಿ ಹಿಂದಕ್ಕೆ ಪಡೆದಿತ್ತು. ನಂತರ ಬಂದ ಕಸ್ತೂರಿ ರಂಗನ್ ವರದಿ ಬಗ್ಗೆ ಜನಪ್ರತಿನಿಧಿಗಳು, ಕೇಂದ್ರ ಬಿಜೆಪಿ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿಲ್ಲ. ಶೋಭಾ ಕರಂದ್ಲಾಜೆ 7 ವರ್ಷ ಸಂಸದರಾಗಿದ್ದರೂ ಜವಾಬ್ದಾರಿ ಮರೆತು ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿ ಜಾರಿಗೆ ಕಾಂಗ್ರೆಸ್ ಸರ್ಕಾರ ಕಾರಣ ಎನ್ನುತ್ತಿದ್ದಾರೆ ಎಂದು ಆರೋಪಿಸಿದರು.
2014, 2017, 2018 ರಲ್ಲಿ ಕೇಂದ್ರ ಸರ್ಕಾರದಿಂದ ಕಸ್ತೂರಿ ರಂಗನ್ ವರದಿ ಬಗ್ಗೆ ನೋಟಿಫಿಕೇಶನ್ ಆಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ವರದಿ ತಿರಸ್ಕಾರ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಮನವಿಯನ್ನು ತಿರಸ್ಕರಿಸಿತು ಎಂದು ದೂರಿದರು.
ರಾಜ್ಯದ 12 ಜಿಲ್ಲೆಗಳಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಬರಲಿದೆ. ಚಿಕ್ಕಮಗಳೂರು ಜಿಲ್ಲೆಯ 144 ಗ್ರಾಮಗಳು ವರದಿ ವ್ಯಾಪ್ತಿಯಲ್ಲಿ ಬರಲಿವೆೆ. ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ 2018ರಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಮಾಡುತ್ತೇವೆ ಎಂದು ಹಸಿರು ಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಅವರು ಪ್ರಮಾಣ ಪತ್ರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.