

ಕಡೂರು: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳ ವೈಫಲ್ಯಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ತಿಳಿಸಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಕಾರ್ಯಕರ್ತರಿಗೆ ಕರೆ ನೀಡಿದರು.
ಕಡೂರು ಬ್ಲಾಕ್ ಕಾಂಗ್ರೆಸ್ನಿಂದ ಶುಕ್ರವಾರ ಜಿಲ್ಲಾ ಅಧ್ಯಕ್ಷರಿಗೆ ಏರ್ಪಡಿಸಿದ್ದ ಸನ್ಮಾನ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬಿಜೆಪಿ ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡುತ್ತಿದೆ. ರಾಷ್ಟ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಲ್ಲಿ ಅನೇಕ ವೈಪಲ್ಯಗಳಿವೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವೈಫಲ್ಯಗಳನ್ನು ಗುರುತಿಸಿ ಬೂತ್ ಮಟ್ಟದಿಂದ ಪ್ರಚಾರ ಮಾಡುವ ಮೂಲಕ ಸಂಘಟನೆಗಳನ್ನು ಬಲಪಡಿಸಬೇಕಿದೆ. ಬ್ಲಾಕ್ಅಧ್ಯಕ್ಷರು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಜತೆಗೆ ಸ್ಥಳೀಯ ಹಿರಿಯ ಮುಖಂಡರ ಸಲಹೆ, ಸೂಚನೆ ಪಡೆದು ಪಕ್ಷವನ್ನು ಸದೃಢಗೊಳಿಸಬೇಕು ಎಂದರು.
ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ವಿರೋಧ ಪಕ್ಷವಾಗಿ ಜನರ ಧ್ವನಿಯಾಗಿದೆ. ಜನಸಾಮಾನ್ಯರ ಸಮಸ್ಯೆಗಳ ಮೂಲಕ ಪರಿಹಾರಕ್ಕೆ ಪ್ರಮಾಣಿಕ ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದರು.
ಯುವಕರಿಗೆ ಉದ್ಯೋಗ ನೀಡುವಲ್ಲಿ ಪ್ರಧಾನ ಮಂತ್ರಿಗಳು ವಿಫಲರಾಗಿದ್ದಾರೆ. ಯುವಕರಿಗೆ ಹೊಸ ಪ್ರಪಂಚ ತೋರಿಸುತ್ತೇವೆ ಎಂಬ ಭ್ರಮೆಯಲ್ಲಿ ಕಾಲಹರಣ ಮಾಡುತ್ತಿದ್ದು ನಿರುದ್ಯೋಗಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ಬಿಜೆಪಿ ನೀಡಿದ ಯಾವುದೇ ಭರವಸೆ ಈಡೇರಿಸಿಲ್ಲದ ಎಂದು ದೂರಿದರು.
ಮುಂಬರುವ ಗ್ರಾಪಂ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಬ್ಲಾಕ್ ಕಾಂಗ್ರೆಸ್ ತಳಮಟ್ಟದಿಂದ ಸಂಘಟನೆಗೆ ಒತ್ತು ನೀಡಿ ಜಿಲ್ಲೆಯಲ್ಲಿ ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತರ ಗೆಲುವಿಗೆ ಶ್ರಮಿಸಬೇಕು ಎಂದರು.