

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಸ್ಥಾನ ಒಲಿದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ, ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನ ಹೊಂದಿದ್ದರು, ಆದ್ರೆ, ಭೀಮಾ ನಾಯ್ಕ್ಗೆ ಎದುರಾಳಿಯಾಗಿ ಯಾರೂ ನಾಮಪತ್ರ ಸಲ್ಲಿಸಿಲ್ಲ. ಇದರಿಂದ ಮತದಾನ ನಡೆಯದೇ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು, ಆದರೆ ಸಿದ್ದರಾಮಯ್ಯ ಅವರ ಆಪ್ತರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.