

ತುಮಕೂರು: ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಕರೆದಿರುವುದನ್ನು ವಿರೋಧಿಸಿ ಜು.21ರಂದು ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ, ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ಹೇಳಿದರು.
ಎಐಸಿಸಿಯ ನಿರ್ಧಾರದಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರಕರಣದಲ್ಲಿ ರಾಹುಲ್‌ಗಾಂಧಿ ಅವರನ್ನು ಸತತ 55 ಗಂಟೆಗಳ ಕಾಲ ಇಡಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಸಂಸತ್ ಅಧಿವೇಶನ ನಡೆಯುವ ವೇಳೆ ಸೋನಿಯ ಗಾಂಧಿ ಅವರನ್ನು ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡುವ ಮೂಲಕ ವಿರೋಧಪಕ್ಷಗಳ ನೈತಿಕತೆಯನ್ನು ಕುಗ್ಗಿಸುವ ಕೆಲಸವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಾಡುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಿಡಿಸಿದರು.
ಜು.21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಜು.22 ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರಿನ ಹೋರಾಟದಲ್ಲಿ ಜಿಲ್ಲೆಯ ಎಲ್ಲ ಮುಖಂಡರು, ಗ್ರಾಪಂನಿಂದ ಜಿಪಂವರೆಗಿನ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಆ ಮೂಲಕ ಇಡಿ ದುರುಪಯೋಗದ ವಿರುದ್ಧ ಕಾಂಗ್ರೆಸ್ ತನ್ನ ಆಕ್ರೋಶ ವ್ಯಕ್ತಪಡಿಸಲಿದೆ ಎಂದರು.
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅವರ ಜನ್ಮ ದಿನದ ಅಮೃತಮಹೋತ್ಸವವನ್ನು ಆ.3ರಂದು ದಾವಣಗೆರೆಯಲ್ಲಿ ಆಯೋಜಿಸಲಾಗಿದೆ. ಸುಮಾರು 5-6 ಲಕ್ಷ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದು, ಆ ಮೂಲಕ ಜನರಿಗೆ ಕಾಂಗ್ರೆಸ್ ಸಾಧನೆ ಹಾಗೂ ಬಿಜೆಪಿಯ ವೈಫಲ್ಯಗಳ ಕುರಿತು ಮನವರಿಕೆ ಮಾಡಿಕೊಡುವ ಪ್ರಯತ್ನ ಇದಾಗಿದೆ ಎಂದು ರಮೇಶ್ ತಿಳಿಸಿದರು.
75 ಕಿ.ಮೀ ಪಾದಯಾತ್ರೆ: ಕಾಂಗ್ರೆಸ್‌ನ ಹಲವರು ತ್ಯಾಗ, ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ ಲಭಿಸಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 1 ರಿಂದ 10ರವರೆಗೆ ರಾಷ್ಟ್ರದ ಎಲ್ಲ ಜಿಲ್ಲೆಗಳಲ್ಲಿಯೂ 75 ಕಿ.ಮೀ., ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು. ರಾಜ್ಯದಲ್ಲಿಯೂ ಆಯಾ ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಹಿರಿಯ ಮುಖಂಡರು ಒಟ್ಟುಗೂಡಿ ಈ ಕಾರ್ಯಕ್ರಮ ರೂಪಿಸಲಿದ್ದಾರೆ. ಇದರ ಜತೆಗೆ ಆಗಸ್ಟ್ 15 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಕಾಂಗ್ರೆಸ್ ಕಾರ್ಯಕರ್ತರು ಸೇರಿ ತ್ರಿವರ್ಣ ಧ್ವಜ ಪಥಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ರಮೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಎಸ್.ಷಪಿ ಅಹಮದ್, ಎಸ್.ರಫೀಕ್ ಅಹಮದ್, ಕೆ.ಷಡಕ್ಷರಿ, ರಮೇಶ್‌ಬಾಬು, ಲಕ್ಕಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮುರಳೀಧರ ಹಾಲಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠ್ ಹಾಜರಿದ್ದರು.
ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಜನ್ಮದಿನವನ್ನು ಸಾಮಾಜಿಕನ್ಯಾಯದ ದಿನವನ್ನಾಗಿ ಆಚರಿಸುವ ಚಿಂತನೆ ಇದೆ. ಆ.3ರ ಅಮೃತ ಮಹೋತ್ಸವದಲ್ಲಿ 5 ವರ್ಷಗಳ ಸಿದ್ದರಾಮಯ್ಯ ಅವರ ಆಡಳಿತದ ಎಲ್ಲ ಮಜುಲುಗಳನ್ನು ಪರಿಚಯಿಸುವ ಕೆಲಸ ನಡೆಯಲಿದೆ.
ಕೆ.ಎನ್.ರಾಜಣ್ಣ ಅಧ್ಯಕ್ಷ, ಸಿದ್ದರಾಮಯ್ಯ ಜನ್ಮದಿನ ಅಮೃತಮಹೋತ್ಸವ ಸ್ವಾಗತ ಸಮಿತಿ