ವಿಮಾನ ನಿಲ್ದಾಣ ಮುಚ್ಚಲ್ಪಟ್ಟರೆ ಕಾಂಗ್ರೆಸ್ ನೇರ ಕಾರಣ

B.Y.Raghavendra
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
Published on

ಶಿವಮೊಗ್ಗ: ಮುಂದಿನ ದಿನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬೀಗ ಹಾಕುವ ಸ್ಥಿತಿ ಎದುರಾದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ. ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್ ಕಾಮಗಾರಿಗೆ ರಾಜ್ಯ ಸರ್ಕಾರದಿಂದ ಗುತ್ತಿಗೆದಾರನಿಗೆ ಬಿಲ್ ಪಾವತಿ ಮಾಡಿಲ್ಲ. ಆದ್ದರಿಂದ ಕಾಮಗಾರಿ ವಿಳಂಬ ಆಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೂರಿದರು.

ಬೈಂದೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಇಲ್ಲಿ ಭೂಮಿ ಕೂಡ ಗುರುತಿಸಲಾಗಿದೆ. ಈ ಬಗ್ಗೆ ರಾಜ್ಯದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಪತ್ರ ಬರೆಯಲಾಗಿದೆ. ಮುಂದಿನ ದಿನದಲ್ಲಿ ಕಾದು ನೋಡಬೇಕಿದೆ. ಶಿವಮೊಗ್ಗ ಜಿಲ್ಲೆಗೆ ವಂದೇ ಭಾರತ್ ರೈಲು ಬರಬೇಕೆಂಬ ಅಪೇಕ್ಷೆ ಇದೆ. ಇದಕ್ಕೆ ಬೇಕಾದ ಎಲ್ಲ ರೀತಿ ಸಿದ್ಧತೆ ನಡೆಯುತ್ತಿದೆ ಎಂದು ತಿಳಿಸಿದರು.
ಅನಾವಶ್ಯಕವಾಗಿ ನಾಲಿಗೆ ಹರಿಬಿಡುವ ಚಾಳಿ ನನ್ನದಲ್ಲ. ಲೋಕಸಭೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಯಾವಾಗ ಮಾತನಾಡಬೇಕು, ಚರ್ಚಿಸಬೇಕೆನ್ನುವ ಸಾಮಾನ್ಯ ಜ್ಞಾನ ನನಗೂ ಇದೆ. ಇನ್ನೊಬ್ಬರಿಂದ ಕೇಳಿ ತಿಳಿದುಕೊಳ್ಳುವ ಅಗತ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪಗೆ ತಿರುಗೇಟು ನೀಡಿದರು.
ಸಚಿವ ಮಧು ಬಂಗಾರಪ್ಪ ಅವರು ಲೋಕಸಭೆಯಲ್ಲಿ ರಾಘವೇಂದ್ರ ಮಾತಾನಾಡುವುದಿಲ್ಲ ಎಂದಿದ್ದಾರೆ. ಅವರಿಗೆ ನಾಚಿಕೆ ಆಗಬೇಕು. ಕ್ಷೇತ್ರದ ಅಭಿವೃದ್ಧಿ ಬಗ್ಗೆ ನನ್ನ ಕೊಡುಗೆ ಏನು ಎನ್ನುವುದನ್ನು ಅರಿತುಕೊಂಡು ಜನರು ಚುನಾವಣೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುತ್ತಲೇ ಬಂದಿದ್ದೇವೆ. ಸಚಿವರು ಜನರಿಂದ ಅಭಿಪ್ರಾಯ ಸಂಗ್ರಹಿಸಿ ಹೇಳಿಕೆ ನೀಡಬೇಕು ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net