ಗ್ಯಾರಂಟಿ ಈಡೇರಿಸಿದ್ದೇವೆ ಎಂದು ಕಾಂಗ್ರೆಸ್ ಸುಳ್ಳು ಪ್ರಚಾರ

Vijayendra
Published on

ರಾಯಚೂರು: ಚುನಾವಣೆ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ ಎಂದು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಸುಳ್ಳು ಪ್ರಚಾರ ಮಾಡುವ ಮೂಲಕ ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸ್ಥಳೀಯ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ನುಡಿದಂತೆ ನಡೆದಿದ್ದೇವೆ ಎಂದು ಹೇಳುವ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದಲ್ಲಿ ವಿಲವಾಗಿದೆ. ಗ್ಯಾರಂಟಿಯ ಸವಲತ್ತುಗಳು ಇಂದಿಗೂ ಜನರಿಗೆ ತಲುಪಿಲ್ಲ ಎಂದರು.
14 ಬಾರಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯರ ಬಗ್ಗೆ ಜನರಲ್ಲಿ ಇದ್ದ ನಿರೀಕ್ಷೆಗಳು ಸುಳ್ಳಾಗಿದ್ದು, ಅಕಾರಕ್ಕೆ ಬಂದು ಏಳೆಂಟು ತಿಂಗಳಾದರೂ ಒಂದು ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗಿಲ್ಲ. ಯಾವುದೇ ಸರ್ಕಾರ ಅಕಾರಕ್ಕೆ ಬಂದ ಐದಾರು ತಿಂಗಳಲ್ಲಿಯೇ ಜನರ ವಿಶ್ವಾಸ ಕಳೆದುಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ.
ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್ಸಿ, ಎಸ್ಟಿ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ರಾಜ್ಯದಲ್ಲಿ ಪ್ರತಿ ವರ್ಷ ಐದು ವಿದ್ಯಾರ್ಥಿಗಳು ಪದವಿ ಪಡೆದು ಹೊರಬರುತ್ತಿದ್ದಾರೆ. ಆದರೆ ಯುವನಿ ಯೋಜನೆಯಡಿ ಇದುವರೆಗೂ 60 ಸಾವಿರ ಯುವಜನರು ನೋಂದಾಯಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿಯಿದೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಬರುವವರೆಗೆ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ತೋರಿಸಬೇಕಾಗಿತ್ತು.
ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಬರ ಸ್ಥಿತಿ ಸಂದರ್ಭದಲ್ಲಿ ರೈತರಿಗೆ 12 ಸಾವಿರ ರೂ. ಪರಿಹಾರ ನೀಡುವ ಮೂಲಕ ರೈತರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿದ್ದರು. ನೆರೆ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಿದ್ದರು. ಕಾಂಗ್ರೆಸ್ ಸರ್ಕಾರ ಕೇವಲ 2 ಸಾವಿರ ರೂ. ನೀಡಿದೆ.
ರಾಯಚೂರು ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿಯಿದ್ದು, ಜಿಲ್ಲೆಗೆ ಏಮ್ಸ್ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಕೇಂದ್ರದ ನಾಯಕರನ್ನು ಭೇಟಿಯಾಗಿ ಒತ್ತಾಯಿಸಲಾಗುವುದು. ಮೋದಿಯವರ ಆಡಳಿತವನ್ನು ಮೆಚ್ಚಿ ಪಕ್ಷಕ್ಕೆ ಬರುವವರನ್ನು ಸ್ವಾಗತಿಸಲಾಗುವುದು ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಸಂಗಣ್ಣ ಕರಡಿ, ರಾಜಾ ಅಮರೇಶ್ವರ ನಾಯಕ, ಮಾಜಿ ಸಂಸದ ಬಿ.ವಿ.ನಾಯಕ, ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕರಾದ ರಾಜುಗೌಡ, ಬಸನಗೌಡ ಬ್ಯಾಗವಾಟ್, ಪಿ.ರಾಜೀವ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net