

ಉಡುಪಿ: ಮುಂದಿನ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಅಳಿವು-ಉಳಿವಿನ ಪ್ರಶ್ನೆಯಾಗಿದ್ದು, ಕಾರ್ಯಕರ್ತರು ನಾಯಕರಾಗಿ ಕೆಲಸ ಮಾಡಬೇಕು. ಪಕ್ಷವು ಎಲ್ಲಾ ಜಾತಿ&ಧರ್ಮವನ್ನು ಸಮಾನವಾಗಿ ಕಾಣುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಬ್ರಹ್ಮಗಿರಿ ಬಳಿಯ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಜಯಪ್ರಕಾಶ್ ಹೆಗ್ಡೆ ಅವರು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಬಲ ಬಂದಿದೆ. ಬಿಜೆಪಿ ಕಳೆದ 10 ವರ್ಷಗಳಲ್ಲಿ ಜನರಿಗೆ ಮೋಸ ಮಾಡಿದ್ದು, ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದ್ದು, ಬಡವರ ಪರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ನಾಯಕರನ್ನು ಸಿಬಿಐ, ಇಡಿ ಮೂಲಕ ಹೆದರಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುತ್ತಿದೆ. ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸುತ್ತಿದೆ. 2 ರಾಜ್ಯದ ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಿದೆ. ಪ್ರಸ್ತುತ ಕಾಲಟ್ಟದಲ್ಲಿ ಚುನಾವಣಾ ಆಯೋಗಕ್ಕೆ ಮಹತ್ವವಿಲ್ಲ. ಮಾಧ್ಯಮಗಳು ಮೋದಿ ಪರ ಪ್ರಚಾರ ನಡೆಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು.
ಮಾಜಿ ಸಚಿವೆ ಮೋಟಮ್ಮ, ಶಾಸಕರಾದ ನಯನಾ ಮೋಟಮ್ಮ, ರಾಜೇಗೌಡ, ಜಿ.ಎಚ್. ಶ್ರೀನಿವಾಸ್, ಎಚ್.ಡಿ. ತಮ್ಮಯ್ಯ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಡಾ. ಅಂಶುಮಂತ್, ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಸುಕುಮಾರ ಶೆಟ್ಟಿ, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ ಭಾಗವಹಿಸಿದ್ದರು.
2012ರ ಉಪಚುನಾವಣೆಯಲ್ಲಿ ಗೆದ್ದ ಬಳಿಕ 20 ತಿಂಗಳಲ್ಲಿ ಜಿಲ್ಲೆಯ ಜನತೆಗಾಗಿ ಸಾಧ್ಯವಾದಷ್ಟು ಕೆಲಸ ಮಾಡಿದ್ದೇನೆ. ತೀರ್ಥಹಳ್ಳಿ&ಮಲ್ಪೆ, ಕಡೂರು&ಬಿಸಿರೋಡ್, ತುಮಕೂರು&ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೆ ಅನುಮೋದನೆ ಪಡೆದುಕೊಳ್ಳಲಾಗಿತ್ತು. 10 ವರ್ಷವಾದರೂ ಈ ರಸ್ತೆಗಳು ಸಂಪೂರ್ಣವಾಗಿಲ್ಲ. ಬಯಲು ಸೀಮೆ, ಮಲೆನಾಡು, ಕರಾವಳಿ ಭಾಗದ ಜನರ ಸಮಸ್ಯೆಗಳು ಪ್ರತ್ಯೇಕವಾಗಿದ್ದು, ಅದನ್ನು ಅರ್ಥಮಾಡಿಕೊಂಡಿದ್ದೇನೆ. ಕರಾವಳಿ ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಲಿದ್ದು, ಹಿಂದಿನ ಕೆಲಸವನ್ನು ಶ್ರೀದಲ್ಲಿ ಪೂರ್ಣಗೊಳಿಸಲು ಜನತೆ ಮತ ನೀಡಬೇಕು.-ಕೆ. ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಅಭ್ಯರ್ಥಿ