

ಮಡಿಕೇರಿ: ಮಹಿಳಾ ಕಾಂಗ್ರೆಸ್ ಸ್ಥಾಪನೆಯಾಗಿ ಸೆ.೧೫ಕ್ಕೆ ೪೦ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತು ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಕೊಡಗು ಮಹಿಳಾ ಕಾಂಗ್ರೆಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ ಮಡಿಕೇರಿಯಲ್ಲಿ ನಡೆಯಿತು.
ನಗರದಲ್ಲಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಅವರು, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕ ಲಂಬಾ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಸೂಚನೆ ಮೇರೆಗೆ ಅಭಿಯಾನ ನಡೆಸಲಾಗುತ್ತಿದೆ. ಪಕ್ಷದ ಬಲವರ್ಧನೆಗೆ ಇದು ಸಹಕಾರಿಯಾಗಿದೆ. ಜಿಲ್ಲೆಯ ಪ್ರತಿ ಬ್ಲಾಕ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ನಡೆಸಿ ಮಹಿಳಾ ಘಟಕದ ಶಕ್ತಿ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಶೈಲಾ ಕುಟ್ಟಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ಧನ್ಯ ರವಿ, ಪ್ರೇಮ ಲಿಂಗಪ್ಪ, ರೇವತಿ ರಮೇಶ್, ಕೆ.ಎಂ.ಪುಷ್ಪಾ ಮುತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.