

ಮಡಿಕೇರಿ: ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿ ಅವಮಾನಿಸಿರುವ ಆರೋಪ ಎದುರಿಸುತ್ತಿರುವ ಹಿಂದೂ ಸಂಘಟನೆಯ ಪ್ರಮುಖ ಪ್ರಭಾಕರ್ ಭಟ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಾಕಾರಿ ಭಾಷಣ ಮಾಡುವ ಮೂಲಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ. ಭಾರತ ಸರ್ವಧರ್ಮಗಳ ಸಮನ್ವಯತೆಯ ಸೌಹಾರ್ಧತೆಯ ರಾಷ್ಟ್ರವಾಗಿದೆ. ಇಲ್ಲಿ ಪ್ರತಿಯೊಬ್ಬ ಸ್ತ್ರೀಗೂ ಗೌರವದ ಸ್ಥಾನಮಾನವಿದೆ. ಆದರೆ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಭರದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಇಡೀ ಸ್ತ್ರೀ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಭಾಕರ್ ಭಟ್‌ಡಿವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಮಾಜದಲ್ಲಿ ಅಶಾಂತಿ ಮೂಡಿಸುವ ಈ ರೀತಿಯ ಪ್ರಯತ್ನಗಳಿಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಇದೇ ರೀತಿಯ ಪ್ರಚೋದನಾಕಾರಿ ಮಾತುಗಳು ಹೆಚ್ಚಾಗುವ ಸಾಧ್ಯತೆಗಳಿದೆ. ಆದ್ದರಿಂದ ಪೊಲೀಸರು ಪ್ರಭಾಕರ್ ಭಟ್‌ಡಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಇನ್ನು ಮುಂದೆ ಈ ರೀತಿಯ ಹೇಳಿಕೆಗಳನ್ನು ನೀಡುವವರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಬೇಕು ಎಂದು ಕೆ.ಜಿ.ಪೀಟರ್ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಸೌಹಾರ್ಧತೆಯ ವಾತಾವರಣವಿದ್ದು, ಎಲ್ಲರೂ ಒಗ್ಗಟ್ಟನಿಂದ ಬದುಕು ಸಾಗಿಸುತ್ತಿದ್ದಾರೆ. ಇದನ್ನು ಕೆಡಿಸಲು ಕೆಲವರು ಹವಣಿಸುತ್ತಿದ್ದು, ಯಾರೂ ಪ್ರಚೋದನೆಗೆ ಒಳಗಾಗದೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.