

ಮಂಡ್ಯ: ಜಿಲ್ಲೆಯಲ್ಲಿ ಕೋಮುವಾದದ ವಿಷ ಬೀಜ ಬಿತ್ತಿ, ರಾಜಕೀಯ ಪ್ರಯೋಜನ ಪಡೆಯಲು ಹೊರಟ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಪ್ರಯತ್ನ ವಿಫಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್‌ನ ಜನಪರ ಯೋಜನೆ, ಕಾಳಜಿ ಬಗ್ಗೆ ಜನರು ಈಗಾಗಲೇ ಅರ್ಥ ಮಾಡಿಕೊಂಡಿದ್ದಾರೆ. ಆದ್ದರಿಂದ ಕೋಮುವಾದಕ್ಕೆ ನಮ್ಮ ಜನ ಸೊಪ್ಪು ಹಾಕುವುದಿಲ್ಲ. ಕೆರಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ, ಕನ್ನಡ ಧ್ವಜ ಹಾರಿಸಲು ಗ್ರಾಪಂನಿಂದ ಅನುಮತಿ ಪಡೆದು, ಆ ಧ್ವಜದ ಕಟ್ಟೆಯ ಮೇಲೆ ಕೇಸರಿ ಬಾವುಟ ಹಾಗೂ ಹನುಮ ಧ್ವಜ ಹಾರಿಸಲಾಗಿತ್ತು. ಜಿಲ್ಲಾಡಳಿತ ಆ ಧ್ವಜ ಇಳಿಸಿ ರಾಷ್ಟ್ರಧ್ವಜ ಹಾರಿಸಿದೆ. ಜಿಲ್ಲಾಡಳಿತ ಸಂವಿಧಾನದ ಆಶಯದಂತೆ ಕಾನೂನಾತ್ಮಕವಾಗಿ ನಡೆದುಕೊಂಡಿದೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಅದನ್ನು ಕೋಮುವಾದೀಕರಣಗೊಳಿಸಿ ರಾಜಕೀಯ ಪ್ರಯೋಜನ ಪಡೆಯಲು ಹೊರಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಸ್ವಾತಂತ್ರ್ಯ ಹೋರಾಟದ ನೆಲೆ. ಇಲ್ಲಿ ಅನೇಕ ಮಹನೀಯರು ಆಡಳಿತ ಮಾಡಿದ್ದಾರೆ. ಹೋರಾಟದ ನಾಡು ನಮ್ಮದು ಎಂಬುದನ್ನು ಯಾರೂ ಸಹ ಮರೆಯಬಾರದು. ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಈ ನೆಲೆದಲ್ಲಿ ಮಾಡಿದ ಘಟಾನುಘಟಿ ನಾಯಕರ ತವರು ಜಿಲ್ಲೆ ಇದಾಗಿದೆ. ಈಗ ಇಂತಹ ನಾಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕೋಮುವಾದದ ವಿಷ ಬೀಜ ಬಿತ್ತಲು ಯತ್ನಿಸುತ್ತಿದೆ. ಮಂಡ್ಯದ ಜನ ಬಹಳ ಪ್ರಜ್ಞಾವಂತರಿದ್ದಾರೆ. ಇಲ್ಲಿ ಶೇ.100ರಲ್ಲಿ 90 ರಷ್ಟು ರೈತರಿದ್ದಾರೆ. ಅವರನ್ನು ಕೆರಳಿಸಬೇಕು. ಕೋಮು ವಾತಾವರಣ ನಿರ್ಮಾಣ ಮಾಡಬೇಕೆಂದು ಬಿಜೆಪಿ ನಾಯಕರು ಪ್ರಚೋದನೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಜನರ ಬದುಕನ್ನು ಕಟ್ಟಲು ಹೊರಟಿದೆ. ಅದಕ್ಕಾಗಿಯೇ ಗ್ಯಾರಂಟಿ ಯೋಜನೆ ನೀಡಿದೆ. ಇದರಿಂದ ಜನರು ನೆಮ್ಮದಿ ಬದುಕು ನಡೆಸುವಂತೆ ಮಾಡಿದೆ ಎಂದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಶ್ರಮವಹಿಸಿದ್ದಾರೆ. 50 ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಇದರಿಂದ ಸಾವಿರಾರೂ ರೈತರಿಗೆ ಅನುಕೂಲವಾಗಿದೆ. ಇಲ್ಲಿ ಯಾವುದೇ ಜಾತಿ ಹಾಗೂ ಪಕ್ಷ ಭೇದ ಮಾಡದೆ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲರಿಗೂ ಅನ್ವಯವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಹೇಳಿದ್ದಾರೆ.