

ಮದ್ದೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಉತ್ತಮವಾದ ಯೋಜನೆಗಳನ್ನು ನೀಡುವ ಮೂಲಕ ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುತ್ತಿದ್ದಾರೆ. ಆದ್ದರಿಂದ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.
ನಮ್ಮ ಜನಪರ ಬಜೆಟ್ ಅನ್ನು ವಿರೋಧ ಪಕ್ಷದವರಿಗೆ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದವರು ಟೀಕೆ ಮಾಡುವುದು ಸಹಜ. ಅದಕ್ಕೆ ಹೆಚ್ಚಿನ ಮಹತ್ವ ನೀಡುವುದು ಬೇಡ ಎಂದರು. ಜಿಲ್ಲೆಯ ಜನ ಬುದ್ಧಿವಂತರಿದ್ದು, ಯಾರನ್ನು ಸಂಸದರನ್ನಾಗಿ ಆಯ್ಕೆ ಮಾಡಬೇಕು ಎಂದು ತಿಳಿದಿದೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮಿತ್ರ ಪಕ್ಷಕ್ಕೆ ಶಿಕ್ಷಕರ ಕ್ಷೇತ್ರದಲ್ಲಿ ಸೋಲಾಗಿದ್ದು, ಅವರ ಅಪವಿತ್ರ ಮೈತ್ರಿಯನ್ನು ಜನರು ಒಪ್ಪುವುದಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ ಎಂದರು. ಜಿಲ್ಲೆಯಲ್ಲಿ ನಮಗೆ ಲೋಕಸಭಾ ಚುನಾವಣೆಯಲ್ಲಿ ಯಾರು ವಿರೋಧಿಗಳು ಎಂಬುದು ಬೇಕಿಲ್ಲ. ಆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿದರು.