ಬೆಲೆ ಹೆಚ್ಚಳ ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾ ಘಟಕ ಪ್ರತಿಭಟನೆ

12Tmk_Yuva_Congress_Protest
Published on

ತುಮಕೂರು: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಅಧಿಕಾರಾವಧಿಯಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಕಾರ್ಯಕ್ರಮ ಜಾರಿಮಾಡಿಲ್ಲ. ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳದ ಮೂಲಕ ಸಾಮಾನ್ಯ ಜನರಿಗೆ ಹಿಂದೆಂದೂ ಕಂಡರಿಯದ ಆಘಾತ ನೀಡಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹರಿಹಾಯ್ದರು.


ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆ ವಿರುದ್ಧ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಪ್ರತಿಭಟನೆಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಅವರು, ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್, ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ದಿನ ಬಳಕೆ ವಸ್ತುಗಳು ಸಾಮಾನ್ಯರಿಗೆ ಕೈಗೆಟುಕದಂತಾಗಿದೆ. ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೆ ಎಲ್ಲ ರೀತಿಯಿಂದಲೂ ಹೊಡೆತ ನೀಡುತ್ತಿದೆ ಎಂದರು.


ನೋಟು ಅಮಾನ್ಯೀಕರಣ, ಸಾಮಾನ್ಯ ಜನತೆ ಬಳಸುವ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿಕೆ. ಎಲ್ಲ ಹಂತಗಳಲ್ಲೂ ಸಾಮಾನ್ಯರಿಗೆ ಹೊಡೆತ ಕೊಡುತ್ತಿದೆ. ಜನತೆ ಹೇಳಿಕೊಳ್ಳಲು ಸಾಧ್ಯವಾಗದಂತಹ ಯಾತನೆ ಅನುಭವಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಇದು ಮೊದಲಿನಿಂದಲೂ ನಡೆಯುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಅಹೋರಾತ್ರಿ ಧರಣಿ ಅಂತ್ಯ: ಕಳೆದ ಎರಡು ದಿನಗಳಿಂದ ಅಹೋರಾತ್ರಿ ಧರಣಿ ನಡೆಸಿದ್ದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. ಶುಕ್ರವಾರ ಸಂಜೆ ರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಲು ಮುಂದಾಗುತ್ತಿದ್ದಂತೆ ತಹಸೀಲ್ದಾರ್ ಜಿ.ವಿ.ಮೋಹನ್ ಕುಮಾರ್ ಸ್ಥಳಕ್ಕೆ ದೌಡಾಯಿಸಿದರು. ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದ ಬಳಿಕ ಅಹೋರಾತ್ರಿ ಧರಣಿಯನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಕೈಬಿಟ್ಟರು.

ಕೇಂದ್ರ ಸರ್ಕಾರ ಇಡಿ, ಐಟಿ ಸೇರಿ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಎದುರಾಳಿಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಯುವ ಕಾಂಗ್ರೆಸ್ ತಕ್ಕ ಉತ್ತರ ನೀಡಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಹೋರಾಟ ನಡೆಸಿದ್ದು ಇದೇ ರೀತಿಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಸರ್ಕಾರಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡಲಾಗುವುದು.
ಎಂ.ಎಸ್. ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net