

ಮಂಡ್ಯ: ಮೈಸೂರು ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಸರ್‌ಎಂವಿ ಪ್ರತಿಮೆ ಎದುರು ಧರಣಿ ನಡೆಸಿದ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮತ್ತು ಬಿಜೆಪಿ, ಜೆಡಿಎಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ತೆರಳಿ ಮನವಿ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮನವಿ ಸ್ವೀಕರಿಸಿದರು.
ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ ಇತರರಿದ್ದರು.