ಮಣಿಪುರ ಗಲಭೆ ಪ್ರಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

CONGRESS NSUI
ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಎನ್‌ಎಸ್‌ಯುಐ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಅಮೀತ ಚವಾಣ್, ಪವನ ಬಿರಾದಾರ, ಶರಣು ದೊಡಮನಿ ಮತ್ತಿತರರಿದ್ದಾರೆ.
Published on

ವಿಜಯಪುರ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ತಡೆಯುವಲ್ಲಿ ಅಲ್ಲಿನ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ಎನ್‌ಎಸ್‌ಯುಐ ಘಟಕದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಪದಾಧಿಕಾರಿಗಳು ಕೂಡಲೇ ಮಣಿಪುರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕೆಂದು ಒತ್ತಾಯಿಸಿದರು.

ಘಟಕದ ಜಿಲ್ಲಾಧ್ಯಕ್ಷ ಅಮೀತ ಚವಾಣ್ ಮಾತನಾಡಿ, ಮಣಿಪುರ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದು, ಸಾವು ನೋವು ಮಾತ್ರವಲ್ಲದೇ ಅನಾಗರೀಕ ಮತ್ತು ಅಮಾನವೀಯ ಕೃತ್ಯೆಗಳು ಹೆಚ್ಚುತ್ತಿವೆ. ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ್ದಲ್ಲದೇ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವುದು ಕೇಳಿ ಬಂದಿದೆ. ಹಿಂಥ ಕೃತ್ಯ ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದ ಗಲಭೆ ಬಗ್ಗೆ ಮಾತನಾಡುತ್ತಿಲ್ಲ. ಹಲವು ರಾಜ್ಯಗಳಲ್ಲಿ ಕೋಮು ಗಲಭೆ ಕಂಡು ಬಂದಿದ್ದರೂ ಈವರೆಗೂ ಆ ಬಗ್ಗೆ ಗಮನ ಹರಿಸಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪವನ ಬಿರಾದಾರ, ಶರಣು ದೊಡಮನಿ, ಮಾಳು ಬಂಡಿವಡ್ಡರ, ಭೀಮು ಗೊಗದೊಡ್ಡಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net