

ಶಿವಮೊಗ್ಗ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಸತತ ವಿಚಾರಣೆಗೆ ಒಳಪಡಿಸುವ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಎದುರು ಬುಧವಾರ ಮೌನ ಪ್ರತಿಭಟನೆ ನಡೆಸಿದರು.
ಮೌನ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಸಿಬಿಐ, ಜಾರಿ ನಿರ್ದೇಶನಾಲಯ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ. ಎದುರಾಳಿ ಪಕ್ಷಗಳ ನಾಯಕರ ನಿಯಂತ್ರಣಕ್ಕೆ ಇವುಗಳ ಬಳಕೆಯಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಸಾಂವಿಧಾನಿಕ ಹುದ್ದೆಗಳನ್ನು ಬಳಸಿಕೊಂಡು ಎದುರಾಳಿ ಪಕ್ಷಗಳ ನಾಯಕರನ್ನು ಕಟ್ಟಿ ಹಾಕುವ ತಂತ್ರ ಅನುಸರಿಸುತ್ತಿದೆ. ಸೂಕ್ತ ಸಾಕ್ಷಾೃಧಾರಗಳಿಲ್ಲದಿದ್ದರೂ ಜಾರಿ ನಿರ್ದೇಶನಾಲಯ ನಿರಂತರವಾಗಿ ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರ ತನಿಖೆ ನಡೆಸುವ ಮೂಲಕ ಅವರಿಗೆ ಮಾನಸಿಕ ಕಿರಕುಳ ನೀಡುತ್ತಿದೆ ಎಂದು ದೂರಿದರು.
ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಎಂದೂ ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ. ಆದರೆ ಬಿಜೆಪಿ ಅದಕ್ಕೆ ತದ್ವಿರುದ್ಧ ವರ್ತನೆ ತೋರುತ್ತಿದೆ. ಆ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಹೆಚ್ಚು ಕ್ರಿಯಾಶೀಲವಾಗಿ ಚುನಾವಣಾ ಚಟುವಟಿಕೆಯಲ್ಲಿ ಭಾಗವಹಿಸದಂತೆ ನೋಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.