

ಮೂಡಿಗೆರೆ: ಎರಡು ಬಾರಿ ಸಂಸದೆಯಾಗಿದ್ದ ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 55.37 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರ ಅಭಿವೃದ್ಧಿಪಡಿಸಿದ್ದಾರೆ. ಮೂಡಿಗೆರೆ ಕ್ಷೇತ್ರಕ್ಕೆ 995 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಪಪಂ ಸದಸ್ಯ ಪಿ.ಜಿ.ಅನು ಕುಮಾರ ತಿಳಿಸಿದರು.
ಹತ್ತು ವರ್ಷದಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿಲ್ಲ ಎಂಬ ಆರೋಪ ಸುಳ್ಳು. ಮೂಡಿಗೆರೆ ಪಪಂ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯ 2.85 ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕೈಗೊಳ್ಳಲಾಗಿದೆ. ಈ ಅನುದಾನ 2022ರಲ್ಲಿ ಬಿಡುಗಡೆಯಾಗಿತ್ತು. ಆಗಲೆ ಪಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಿಯಾ ಯೋಜನೆ ತಯಾರಿಸಲಾಗಿತ್ತು. ಈಗಿನ ಶಾಸಕಿ ನಯನ ಮೋಟಮ್ಮ ನಗರೋತ್ಥಾನ ಯೋಜನೆ ಕಾಮಗಾರಿಗೆ ಚಾಲನೆ ನೀಡಿ, ಕಾಂಗ್ರೆಸ್ ಸರ್ಕಾರದ ಅನುದಾನ ಎಂದು ಹೇಳಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕ್ಷೇತ್ರಕ್ಕೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಪಪಂ ಸದಸ್ಯ ಮನೋಜ್ ಕುಮಾರ್ ಮಾತನಾಡಿ, ಪಟ್ಟಣದಲ್ಲಿ ಪಕ್ಕಾ ಮನೆ ನಿರ್ಮಾಣಕ್ಕೆ 22.32 ಲಕ್ಷ, ತಡೆಗೋಡೆ ಮತ್ತು ರಸ್ತೆಗೆ ಇಂಟರ್‌ಲಾಕ್ ಟೈಲ್ಸ್ ಅಳವಡಿಕೆಗೆ 34.92ಲಕ್ಷ, ಕಡೆಮಾಡ್ಕಲ್ ಗ್ರಾಮದ ಕಸವಿಲೆ ಘಟಕದ ತಡೆಗೋಡೆಗೆ 2 ಕೋಟಿ ರೂ. ಸೇರಿದಂತೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ 12 ಕೋಟಿ ಅನುದಾನದಲ್ಲಿ ಈಗ ಕಾಮಗಾರಿ ನಡೆಯುತ್ತಿದೆ. ಕೆಲ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದು ತಿಳಿಸಿದರು.
ಪಪಂ ಸದಸ್ಯೆ ಆಶಾ ಮೋಹನ್ ಮಾತನಾಡಿ, ತಾಲೂಕು ಆಸ್ಪತ್ರೆಗೆ ಕೇಂದ್ರ ಸರ್ಕಾರ ನೀಡಿದ 50 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತ ಐಸಿಯು ಘಟಕ, 1ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗಿದೆ. ಬಿಜೆಪಿ ಸರ್ಕಾರ ನೀಡಿದ ಅನುದಾನವನ್ನು ಕಾಂಗ್ರೆಸ್ ಶಾಸಕರು ನಮ್ಮದೆಂದು ಹೇಳಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.
ಪಪಂ ಸದಸ್ಯೆ ಕಮಲಮ್ಮ, ಮುಖಂಡರಾದ ಎಂ.ಕೆ.ಚಂದ್ರೇಶ್, ಧನಿಕ್, ಸುಂದರೇಶ್, ಪದ್ಮಣ್ಣ ಇದ್ದರು.