ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಸಂಸದ ಪ್ರತಾಪ್​ ಸಿಂಹ ಕಚೇರಿಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಮುತ್ತಿಗೆ

Congress
Published on

ಮೈಸೂರು: ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್​ ಭವನದಲ್ಲಿ ಭಾರಿ ಭದ್ರತಾ ಲೋಪ ಕಂಡುಬಂದಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್​ ಸಿಂಹ ಅವರ ಕಚೇರಿಗೆ ಕಾಂಗ್ರೆಸ್​ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

ಕಾಂಗ್ರೆಸ್​ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಈ ಕೃತ್ಯಕ್ಕೆ ಸಂಸದರೇ ನೇರ ಹೊಣೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪಿಸಿದ್ದಾರೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿರುವ ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಈ ಕೃತ್ಯಕ್ಕೆ ಸಂಸದ ಪ್ರತಾಪ್​ ಸಿಂಹ ಅವರೇ ನೇರ ಹೊಣೆ ಎಂದು ಆರೋಪಿಸಿದ ಕಾಂಗ್ರೆಸ್​ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಸಂಸದರ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net