ನೆಲ್ಲಿಹುದಿಕೇರಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

11gkp01
ವಿರಾಜಪೇಟೆ ತಾಲೂಕಿನ ದಂಡಾಧಿಕಾರಿ ಹಾಗೂ ತಹಸೀಲ್ದಾರ್ ರಾಮಚಂದ್ರ ಜಾಥಾ ಉದ್ಘಾಟನೆ ಮಾಡಿದರು. ವೇದಿಕೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರೀತಿ ಚಿಕ್ಕಮಾದು, ಇಒ ಕೆ.ಸಿ. ಅಪ್ಪಣ್ಣ, ಬಿಇಒ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
Published on

ಗೋಣಿಕೊಪ್ಪ: ವಿರಾಜಪೇಟೆ ತಾಲೂಕಿನ ಗಡಿ ಭಾಗ ಸಿದ್ದಾಪುರ ಬಳಿಯ ನೆಲ್ಲಿಹುದಿಕೇರಿ ಕಾವೇರಿ ನದಿ ಸೇತುವೆ ಬಳಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಭಾನುವಾರ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರಾಮಚಂದ್ರ ಅವರ ಮುಂದಾಳತ್ವದಲ್ಲಿ ಜಾಥಾವನ್ನು ಬರಮಾಡಿಕೊಳ್ಳಲಾಯಿತು. ಬಳಿಕ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಅಂಬೇಡ್ಕರ್ ಭಾವಚಿತ್ರಕ್ಕೆ ಆರತಿ ಬೆಳಗಿದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್ ಮೆರವಣಿಗೆ ಉದ್ಘಾಟಿಸಿದರು.

ಸೇತುವೆ ಬಳಿಯಿಂದ ಹೊರಟ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯಲ್ಲಿ ಕಳಸ ಹೊತ್ತ ಮಹಿಳೆಯರು, ಕಲಾ ತಂಡಗಳು, ಆಟೋ ರಿಕ್ಷಾಗಳು, ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್‌ಗಳು ಗಮನ ಸೆಳೆದವು. ತಾಲೂಕು ಪಂಚಾಯಿತಿ ಇಒ ಅಪ್ಪಣ್ಣ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರೀತಿ ಚಿಕ್ಕಮಾದು, ಬಿಇಒ ಪ್ರಕಾಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡು ಮೆರವಣಿಗೆಯಲ್ಲಿ ಸಾಗಿದರು.

ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮವನ್ನು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾಗೋಪಾಲ್ ಉದ್ಘಾಟಿಸಿದರು. ತಹಸೀಲ್ದಾರ್ ರಾಮಚಂದ್ರ ಸಂವಿಧಾನ ಪೀಠಿಕೆ ಓದಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿರಾಜಪೇಟೆಯ ಅರ್ಜುನ್ ಮೌರ್ಯ ಮಾತನಾಡಿ, ಸಂವಿಧಾನ ಆಶಯದಂತೆ ದೇಶದ ಪ್ರತಿ ನಾಗರಿಕನೂ ನಡೆದುಕೊಳ್ಳಬೇಕು. ಪ್ರಪಂಚದಲ್ಲಿಯೇ ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದೆ. ಡಾ.ಅಂಬೇಡ್ಕರ್ ಅವರ ಕಠಿಣ ಪರಿಶ್ರಮದ ಫಲವಾಗಿ ಇಂದು ಎಲ್ಲರೂ ಸಾಮಾಜಿಕ ವ್ಯವಸ್ಥೆಯಡಿಯಲ್ಲಿ ಜೀವನ ಸಾಗಿಸಲು ಸಂವಿಧಾನ ಅನುಕೂಲವಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಭಾಷಣ, ಭಾವಗೀತೆ ಹಾಗೂ ನೃತ್ಯ ಕಾರ್ಯಕ್ರಮಗಳು ನಡೆದವು.ತಾಪಂ ಇಒ ಕೆ.ಸಿ.ಅಪ್ಪಣ್ಣ, ಬಿಇಒ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ಜಿ.ಪಂ. ಮಾಜಿ ಸದಸ್ಯ ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net