ಪಾದರಹಳ್ಳಿಯಲ್ಲಿ ಪವರ್ ಸ್ಟೇಷನ್ ನಿರ್ಮಾಣ

FotoJet
Published on

ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಹೇಳಿಕೆ | ಅಂಗನವಾಡಿ ಕೇಂದ್ರ ಉದ್ಘಾಟನೆ | ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ

ರಾಮನಗರ : ಪಾದರಹಳ್ಳಿ ಗ್ರಾಮಕ್ಕೆ ಪವರ್ ಸ್ಟೇಷನ್ ಮಂಜೂರಾಗಿದ್ದು, ಗುಂಡುತೋಪಿನಲ್ಲಿ ಪವರ್ ಸ್ಟೇಷನ್ ನಿರ್ಮಾಣ ಮಾಡಲಾಗುತ್ತದೆ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ತಿಳಿಸಿದರು.

ರಾಮನಗರ ತಾಲೂಕಿನ ಪಾದರಹಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಶಿಕ್ಷಣ ಮುಖ್ಯವಾಗಿದ್ದು, ಯಾವೊಂದು ಮಗುವೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ತಿಳಿಸಿದರು.

ಸಮಾಜದಲ್ಲಿ ಉತ್ತಮ ಜೀವನ ನಡೆಸಲು, ಒಳ್ಳೆಯ ಸ್ಥಾನ ಅಲಂಕರಿಸಲು ಹಾಗೂ ಸಮಾಜ ಸುಧಾರಣೆ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ. ಪಾದರಹಳ್ಳಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದೇವೆ. ಸಿಸಿ ರಸ್ತೆ, ಡ್ರೈನೇಜ್ ಕಾಮಗಾರಿ ಪೂರ್ಣಗೊಂಡಿದೆ. ಸಿಎಸ್‌ಆರ್ ಅನುದಾನದಲ್ಲಿ ಹೈಟೆಕ್ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. 6.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಿದ್ದೇವೆ ಎಂದರು.

ರೈತರಿಗೆ ಸಾಗುವಳಿ ಚೀಟಿ ಹಾಗೂ ಬಡವರಿಗೆ ನಿವೇಶನ ವಿತರಿಸಲು ಕ್ರಮ ವಹಿಸಲಾಗಿದೆ. ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡಲು 3-4 ಎಕರೆ ಭೂಮಿ ಸಿಕ್ಕಿದ್ದು, ಶೀಘ್ರದಲ್ಲಿಯೇ ನಿವೇಶನ ವಿತರಣೆಗೆ ಕ್ರಮ ವಹಿಸಲಾಗುತ್ತದೆ ಹೇಳಿದರು.

ಕಸ ಸಂಸ್ಕರಣ ಘಟಕ ನಿರ್ಮಾಣದಿಂದ ಕೃಷಿ ಚಟುವಟಿಕೆ ಹಾಗೂ ಜನರು ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಯಾರಿಗೂ ಅನಾನುಕೂಲವಾಗದಂತೆ ಎಚ್ಚರ ವಹಿಸಿ ಘಟಕ ನಿರ್ಮಾಣ ಮಾಡಲಾಗುವುದು. ಇಲ್ಲಿ ಕಸ ವಿಲೇವಾರಿ ಮಾಡುವುದಿಲ್ಲ. ಬದಲಿಗೆ ಕಸದಿಂದ ಗೊಬ್ಬರ ಉತ್ಪಾದನೆ ಮಾಡಲಾಗುತ್ತದೆ. ಘಟಕ ನಿರ್ಮಾಣ ಸಂಬಂಧ ಅಧಿಕಾರಿಗಳು ಕ್ರಮ ವಹಿಸುತ್ತಾರೆ ಎಂದು ತಿಳಿಸಿದರು.

ಮಾಜಿ ಶಾಸಕ ಕೆ. ರಾಜು, ಹರೀಸಂದ್ರ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ, ಉಪಾಧ್ಯಕ್ಷ ವೀರಭದ್ರಸ್ವಾಮಿ, ಸದಸ್ಯರಾದ ರಾಮು, ಸತೀಶ್, ರೂಪಾ ಚಂದ್ರು, ಮುಖಂಡರಾದ ಪುಟ್ಟಣ್ಣ, ಮಹದೇವ್, ತ್ಯಾಗಣ್ಣ, ಮಂಚೇಗೌಡ, ಜಯಕರ್ನಾಟಕ ರವಿ, ಸಂದೀಪ, ಸಿಡಿಪಿಒ ಕಾಂತರಾಜು, ಮೇಲ್ವಿಚಾರಕಿ ನಿಂಬವ್ವ, ಪಿಡಿಒ ದಯಾನಂದ ಸಾಗರ್, ಅಂಗನವಾಡಿ ಶಿಕ್ಷಕಿ ರಾಧಾ ಇದ್ದರು.

ಮಂಚನಬೆಲೆ ಜಲಾಶಯದಿಂದ ಎಡದಂಡೆ ನಾಲೆಯಲ್ಲಿ ನೀರು ಹರಿಸಲಾಗುತ್ತಿದ್ದು, ಮುಂದಿನ 15 ದಿನದೊಳಗೆ ಬಲದಂಡೆ ನಾಲೆಯಲ್ಲಿಯೂ ನೀರು ಹರಿಸಲಾಗುವುದು. 20 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಳೇಗೌಡನದೊಡ್ಡಿ ಏತನೀರಾವರಿ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. -ಶಾಸಕ ಎಚ್.ಎ. ಇಕ್ಬಾಲ್ ಹುಸೇನ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net