ಬ್ಯಾಡಗಿ ಹೊಸ ಬಸ್ ನಿಲ್ದಾಣ ಕಾಮಗಾರಿ ಶೀಘ್ರ

14byd-1
Published on

ಬ್ಯಾಡಗಿ: ಹೆಣ್ಣು ಮಕ್ಕಳಿಗೆ ಉಚಿತವಾಗಿ ರಾಜ್ಯಾದ್ಯಂತ ಪ್ರಯಾಣಿಸುವ ಅವಕಾಶವನ್ನು ದೇಶದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ ನೀಡಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ರಾಜ್ಯದಲ್ಲಿ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹೊಸ ಬಸ್‌ಗೆ ಸೋಮವಾರ ಪೂಜೆ ಸಲ್ಲಿಸಿ ಮಾತನಾಡಿದರು.

ಕಾಕೋಳ ರಸ್ತೆಗೆ ಹೊಂದಿಕೊಂಡ ಲೋಕೋಪಯೋಗಿ ಇಲಾಖೆಯ ಒಂದೂವರೆ ಎಕರೆ ಜಾಗದಲ್ಲಿ ಹೊಸ ಬಸ್ ನಿಲ್ದಾಣ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ಈಗಾಗಲೇ 10 ಕೋಟಿ ರೂ. ಮಂಜೂರಾಗಿದ್ದು ಜಾಗ ಹಸ್ತಾಂತರ ಪ್ರಕ್ರಿಯೆ ವಿಳಂಬವಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಸಾರಿಗೆ ಇಲಾಖೆಗೆ ಜಾಗ ಹಸ್ತಾಂತರಿಸುವ ಕಾರ್ಯವಾಗಬೇಕಿದ್ದು, ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಗ್ಯಾರಂಟಿ ಯೋಜನೆ ತಾಲೂಕಾಧ್ಯಕ್ಷ ಶಂಭಣ್ಣ ಪಾಟೀಲ ಮಾತನಾಡಿ, ಶಾಸಕರು ವಿಶೇಷವಾಗಿ ತಾಲೂಕಿನ ಸಾರಿಗೆ ಘಟಕಕ್ಕೆ 8 ಹೊಸ ಬಸ್ ಮಂಜೂರು ಮಾಡಿಸಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿ ತಿಂಗಳು 6 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಲಾಭ ಪಡೆಯುತ್ತಿದ್ದಾರೆ ಎಂದರು.

ಬಸ್ ನಿಲ್ದಾಣದಲ್ಲಿ ಮಹಿಳೆಯರ ವಿಶ್ರಾಂತಿ ಕೊಠಡಿ ಕಡ್ಡಾಯವಾಗಿ ನಿರ್ವಹಿಸಬೇಕು. ನಿಲ್ದಾಣದಲ್ಲಿ ಮೂಲಸೌಲಭ್ಯ ಕಲ್ಪಿಸಲು ಸಂಬಂಧಿಸಿದವರಿಗೆ ಸೂಚಿಸಲಾಗಿದೆ ಎಂದರು.

ಸಾರಿಗೆ ಘಟಕ ವ್ಯವಸ್ಥಾಪಕ ಗುರುಬಸಪ್ಪ ಅಡರಕಟ್ಟಿ, ಗ್ಯಾರಂಟಿ ಯೋಜನೆ ಅಧ್ಯಕ್ಷ ಶಂಭನಗೌಡ್ರ ಪಾಟೀಲ, ಪುರಸಭೆ ಆಶ್ರಯ ಸಮಿತಿ ಅಧ್ಯಕ್ಷ ಮುನಾಫ್‌ಅಲಿ ಎರೆಸೀಮೆ, ಸದಸ್ಯರಾದ ಗಿರೀಶ ಇಂಡಿಮಠ, ದುರ್ಗೆಶ ಗೋಣೆಮ್ಮನವರ, ಫೀರಾಂಬಿ ದೇಸೂರು, ಸುಶೀಲಾ ಲಮಾಣಿ, ಎ.ಎಸ್.ಸೌದಾಗರ, ರಾಜು ಕಲ್ಯಾಳ ಇತರರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net