

ಮೈಸೂರು: ನಗರದಲ್ಲಿ ಹೊರಪರಿಧಿ ರಸ್ತೆ (ಪೆರಿಫೆರಲ್ ರಿಂಗ್ ರೋಡ್) ನಿರ್ಮಾಣ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪೆರಿಫೆರಲ್ ರಿಂಗ್ ರೋಡ್ ಮತ್ತು ಫ್ಲೈ ಓವರ್ ನಿರ್ಮಾಣ ಸಂಬಂಧ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು.
ಮೈಸೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.
ಈ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದವರಿಗೆ ಆ ಜಾಗದ ಬೆಲೆಯ ಹಣ ಅಥವಾ ಬೇರೆ ಭೂಮಿಯನ್ನು ನೀಡಲು ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಅಲ್ಲದೆ, ಬೆಂಗಳೂರು-ಮೈಸೂರು ಹೆದ್ದಾರಿ ಮತ್ತು ರಿಂಗ್‌ರೋಡ್ ಸಂಪರ್ಕಿಸುವ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದ್ದು, ಈ ಕಾಮಗಾರಿ ವೈಜ್ಞಾನಿಕವಾಗಿ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಳ್ಳಲು ಸರ್ವೇ ಮಾಡಲಾಗುವುದು. ಇದರಲ್ಲಿ ಬೆಂಗಳೂರು ಕಡೆಯಿಂದ ಬಂದು ತಿ.ನರಸೀಪುರ, ಹುಣಸೂರು, ನಂಜನಗೂಡು ಕಡೆಗೆ ಹೋಗುವ ವಾಹನಗಳ ಸಂಖ್ಯೆ ತಿಳಿದರೆ ಒತ್ತಡ ಕಡಿಮೆ ಮಾಡಲು ರಸ್ತೆ ಸೌಲಭ್ಯ, ಸರ್ವೀಸ್ ರಸ್ತೆ ಕಲ್ಪಿಸಲು ಅನುಕೂಲವಾಗುವುದು ಎಂದರು.
ಮೈಸೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಯಾಗಿದೆ. ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 20 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಜಿಲ್ಲೆಯಲ್ಲಿ ರಸ್ತೆಗಳು, ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಗರದಲ್ಲಿ ಅಗತ್ಯ ಇರುವ ಕಡೆ ಸ್ಕೈ ವಾಕ್‌ಗಳನ್ನು ನಿರ್ಮಿಸಲು ಯೋಜನೆ ತಯಾರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಗುಜರಾತ್, ಮಹಾರಾಷ್ಟ್ರದ ಅಧಿಕಾರಿಗಳು ಇಲ್ಲಿನ ಮೂಲಸೌಕರ್ಯಗಳ ಕುರಿತು ಅಧ್ಯಯನ ಮಾಡಲು ಬರುತ್ತಿದ್ದಾರೆ. ಮೈಸೂರು ಮಾದರಿಯನ್ನು ತಮ್ಮ ರಾಜ್ಯಗಳಲ್ಲಿ ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ. ಆದ್ದರಿಂದ ಮೈಸೂರಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಡೆಗೆ ಗಮನ ಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಶಾಸಕ ಕೆ.ಹರೀಶ್‌ಗೌಡ, ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್. ಅಜಯ್ ನಾಗಭೂಷಣ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಇತರರು ಇದ್ದರು.