ಶೋಭಾ ಕರಂದ್ಲಾಜೆ ವಿರುದ್ಧ ಮುಂದುವರಿದ ಅಭಿಯಾನ

22 ckm 6
ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದಾಖಲೆಗಳನ್ನಿಟ್ಟು ಬಿಜೆಪಿ ಕಾರ್ಯಕರ್ತರು ಅಭಿಯಾನ ಆರಂಭಿಸಿರುವ ಪೋಸ್ಟ್.
Published on

ಚಿಕ್ಕಮಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಾರ್ಯಕರ್ತರ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಗೋ ಬ್ಯಾಕ್ ಶೋಭಾ ಅಭಿಯಾನದ ಬಳಿಕ ಕೇಂದ್ರ ಸಚಿವೆ ವಿರುದ್ಧ ಪತ್ರ ಚಳವಳಿ ನಡೆಸಿದ ಬಿಜೆಪಿ ಕಾರ್ಯಕರ್ತರು ಇದೀಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ ಸಾಮಾಜಿಕ ಜಾಲ ತಾಣಗಳಲ್ಲಿ ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ಆರಂಭಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಕೆಲ ಬಿಜೆಪಿ ಕಾರ್ಯಕರ್ತರು ನಿರಂತರವಾಗಿ ಅಭಿಯಾನ ಆರಂಭಿಸಿರುವುದು ಬಿಜೆಪಿ ನಾಯಕರಿಗೆ ಮುಜುಗರ ತಂದೊಡ್ಡಿದೆ. ಈ ಬಾರಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಆರಂಭಿಸಿರುವ ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನದಲ್ಲಿ ದಾಖಲೆಗಳನ್ನೂ ಸೇರಿಸಿರುವುದು ವಿಶೇಷವಾಗಿದೆ.
ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ೨೦೧೯ರಿಂದ ೨೦೨೩ರವರೆಗೆ ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳಿಗೆ ಯಾವುದೇ ಅನುದಾನ ನೀಡಿಲ್ಲ ಎಂದು ಆರ್‌ಟಿಐನಲ್ಲಿ ಮಾಹಿತಿ ಪಡೆದು ಅದನ್ನೂ ಅಭಿಯಾನದಲ್ಲಿ ಬಳಸಿಕೊಳ್ಳಲಾಗಿದೆ. ಜೊತೆಗೆ ಈ ಪೋಸ್ಟ್ ನಲ್ಲಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಹಾಗೂ ಅಮಿತ್ ಅವರಿಗೆ ಹ್ಯಾಷ್ ಟ್ಯಾಗ್ ಮೂಲಕ ಗಮನಸೆಳೆಯುವ ಕೆಲಸ ಮಾಡಲಾಗಿದೆ.
ಶೋಭಾ ಕರಂದ್ಲಾಜೆ ಅವರು ಸಂಸದರಾಗಿ ೩,೫೮೩ ದಿನದಲ್ಲಿ ೧೦೦ ದಿನವೂ ಕ್ಷೇತ್ರಕ್ಕೆ ಬಂದಿಲ್ಲ. ಕ್ಷೇತ್ರಕ್ಕೆ ಬಾರದ ಸಂಸದರು ನಮಗೆ ಬೇಕೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಪ್ರಶ್ನಿಸಲಾಗಿದೆ. ಈ ರೀತಿ ದಾಖಲೆಗಳನ್ನಿಟ್ಟು ಅಭಿಯಾನ ಆರಂಭಿಸಿರುವುದು ಬಿಜೆಪಿ ನಾಯಕರಿಗೆ ಮುಜುಗರವನ್ನುಂಟು ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net