

ಹನೂರು: ಉತ್ತಮ ಸಮಾಜಕ್ಕೆ ಪಿಡುಗಾಗಿರುವ ಬಾಲ್ಯ ವಿವಾಹವನ್ನು ತಡೆಗಟ್ಟಲು ಎಲ್ಲರೂ ಶ್ರಮಿಸುವುದರ ಮೂಲಕ ಚಾಮರಾಜನಗರವನ್ನು ಬಾಲ್ಯ ವಿವಾಹಮುಕ್ತ ಜಿಲ್ಲೆಯಾಗಿಸೋಣ ಎಂದು ತಹಸೀಲ್ದಾರ್ ಕೆ.ಎನ್.ಚೈತ್ರಾ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಅತಿಥಿಗೃಹದ ಸಭಾಂಗಣದಲ್ಲಿ ಸೋಮವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪೊಲೀಸ್ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಿದ್ದ ಬಾಲ್ಯ ವಿವಾಹ ಮುಕ್ತ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಾಲ್ಯ ವಿವಾಹ ಸಾಮಾಜಿಕ ಪಿಡುಗು. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಕಾನೂನಿನ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಆದರೆ ಈ ಬಗ್ಗೆ ತಿಳಿದಿದ್ದರೂ ಕೆಲ ಪಾಲಕರು ಜವಾಬ್ದಾರಿಯಿಂದ ಮುಕ್ತಿ ಹೊಂದಲು ಹೆಣ್ಣು ಮಕ್ಕಳನ್ನು ಬಾಲ್ಯ ವಿವಾಹಕ್ಕೆ ದೂಡುತ್ತಿದ್ದಾರೆ. ಬಾಲ್ಯ ವಿವಾಹ ಹೆಣ್ಣು ಮಕ್ಕಳಲ್ಲಿ ಅಪೌಷ್ಟಿಕತೆಗೆ ಕಾರಣವಾಗುತ್ತದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಕುಟುಂಬಗಳಲ್ಲಿ ಸಮಸ್ಯೆಯನ್ನು ತಂದೊಡ್ಡುತ್ತದೆ. ಆದ್ದರಿಂದ ಬಾಲ್ಯ ವಿವಾಹದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವಂತೆ ಮನವರಿಕೆ ಮಾಡಿಕೊಡಬೇಕಿದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆದಾಗ ಬಾಲ್ಯ ವಿವಾಹವನ್ನು ತಡೆಗಟ್ಟಬಹುದು. ಇದಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.
ಒಂದು ವೇಳೆ ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098 ಹಾಗೂ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ತಿಳಿಸಬೇಕು. ಈ ಮೂಲಕ ತಾಲೂಕಿನಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟುವುದರ ಮೂಲಕ ಜಿಲ್ಲೆಯನ್ನು ಬಾಲ್ಯ ವಿವಾಹಮುಕ್ತವಾಗಿಸೋಣ ಎಂದರು.
ಹಾಡಿಗಳಲ್ಲಿ ಅರಿವು ಅಗತ್ಯ: ತಾಲೂಕು ಪಂಚಾಯಿತಿ ಇಒ ಉಮೇಶ್ ಮಾತನಾಡಿ, ತಾಲೂಕಿನಲ್ಲಿ ಸುಮಾರು 84ಕ್ಕೂ ಹೆಚ್ಚು ಗಿರಿಜನರ ಹಾಡಿಗಳಿವೆ. ಇಲ್ಲಿನ ಜನರಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವಿಲ್ಲದ ಪರಿಣಾಮ ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ. ಆದ್ದರಿಂದ ಹಾಡಿಗಳಲ್ಲಿ ಬಾಲ್ಯ ವಿವಾಹದ ನಿಷೇಧದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕಿದೆ. ಇದರಿಂದ ಬಾಲ್ಯ ವಿವಾಹವನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ಶಿರಸ್ತೇದಾರ್ ನಾಗೇಂದ್ರ, ಆರ್‌ಐ ಶೇಷಣ್ಣ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಗ್ರಾಮ ಆಡಳಿತ ಅಧಿಕಾರಿಗಳಾದ ವಿನೋದ್, ಲೋಕೇಶ್ ಹಾಗೂ ಇನ್ನಿತರರು ಇದ್ದರು.