

ವಿಜಯಪುರ: ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ನಗರದ ಸಂತ ಅನ್ನಮ್ಮನವರ ದೇವಾಲಯದಲ್ಲಿ ಸೋಮವಾರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಉತ್ತಮ ಗುಣಮಟ್ಟದ ಆರೋಗ್ಯ, ಶಿಕ್ಷಣ, ಮಕ್ಕಳ ಮೂಲ ಹಕ್ಕಾಗಿದ್ದು, ಇದನ್ನು ಉತ್ತಮಪಡಿಸುವುದರಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗುವುದು. ಬಾಲ ಕಾರ್ಮಿಕ ಪದ್ಧತಿಯನ್ನು ಅಡಿಪಾಯದಿಂದಲೇ ನಿರ್ಮೂಲನೆಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಪೊಲೀಸ್ ಇಲಾಖೆಯೊಂದಿಗೆ ಇತರ ಎಲ್ಲಾ ಇಲಾಖೆಗಳು ಶ್ರಮಿಸುತ್ತಿವೆ. ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಮಕ್ಕಳ ಸಹಾಯವಾಣಿ-1098 ಹಾಗೂ ಸಹಾಯವಾಣಿ-112ಕ್ಕೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮಕ್ಕಳ ರಕ್ಷಣೆಯ ಕಾರ್ಯ ಮಾಡಲಾಗುವುದೆಂದು ಎಂದರು.
ಫಾದರ್ ಟಿಯೋಲ್ ಮಚಾದೋ ಮಾತನಾಡಿ, ಸಮಗ್ರ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ ಆಗಿದೆ. ಬಾಲಕಾರ್ಮಿಕ ಪದ್ಧತಿಯ ಪಿಡುಗು ಮಕ್ಕಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಕಸಿದುಕೊಳ್ಳುತ್ತಿದ್ದು, ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಮಾಡಬೇಕೆಂದರು.
ಯೋಜನಾ ನಿರ್ದೇಶಕಿ ನೀಲಮ್ಮ ಖೇಡಗಿ ಮಾತನಾಡಿ, ಜಿಲ್ಲೆಯಲ್ಲಿ 1028 ವಿವಿಧ ಉದ್ದಿಮೆಗಳ ಹಾಗೂ ವಾಣಿಜ್ಯ ಸಂಸ್ಥೆ ತಪಾಸಣೆ ಕೈಗೊಳ್ಳಲಾಗಿದೆ. 11 ಬಾಲಕಾರ್ಮಿಕರ ರಕ್ಷಣೆ ಮಾಡಲಾಗಿದೆ. 30 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಹೂಡಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ. ಚವ್ಹಾಣ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಜಿ. ಕುಲಕರ್ಣಿ, ಯೋಜನಾ ನಿರ್ದೇಶಕಿ ಸುನಂದ ತೋಳಬಂದಿ, ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರ, ರಾಜು ದಂಡಾವತಿ ಉಪಸ್ಥಿತರಿದ್ದರು.
ಜಾಗೃತಿ ಜಾಥಾಗೆ ಚಾಲನೆ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಚಾಲನೆ ನೀಡಿದರು.
ಜಾಥಾ ಗಾಂಧಿ ಚೌಕ್‌ದಿಂದ ಸಿದ್ಧೇಶ್ವರ ದೇವಸ್ಥಾನ ಮೂಲಕ ವಿವಿಧ ಮಾರ್ಗಗಳಲ್ಲಿ ಸಂಚರಿಸಿತು. ವಿಜಯಪುರ ನಗರದ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.