

ಮಡಿಕೇರಿ: ಕೋವಿಡ್-೧೯ ನಿಯಂತ್ರಣ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವಲ್ಲಿ ೧೫ ದಿನಕ್ಕೊಮ್ಮೆ ವಿಡಿಯೋ ಸಂವಾದ ಮೂಲಕ ಸಭೆ ಏರ್ಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ಮಾಡಿದರು.
ಕೋವಿಡ್-೧೯ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಸರ್ಕಾರವು ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಗಡಿಭಾಗಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಅಗತ್ಯ ಪರೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧೋಪಚಾರಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಸೇರಿದಂತೆ ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಕೋವಿಡ್ ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ, ಸಮುದಾಯ ಮತ್ತು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.