ಹಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ

10HDK0003
ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಬಳ್ಳೆ ಹಾಡಿ ಹಾಗೂ ಗೋಳೂರು ಹಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮೈಸೂರಿನ ಶೈಲಜಾ ರಾಮಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
Published on

ಎಚ್.ಡಿ.ಕೋಟೆ: ತಾಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಬಲ್ಲೆ ಹಾಡಿ ಹಾಗೂ ಗೋಳೂರು ಹಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮೈಸೂರಿನ ಶೈಲಜಾ ರಾಮಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ಮತ್ತು ಅಂಗನವಾಡಿ ಮಕ್ಕಳಿಗೆ ಪ್ಲಾಸ್ಟಿಕ್ ಕುರ್ಚಿಗಳನ್ನು ವಿತರಿಸಲಾಯಿತು.

ಅಲ್ಲದೆ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆ ಅಧ್ಯಕ್ಷೆ ಶೈಲಜಾ ರಾಮಕೃಷ್ಣ ಮಾತನಾಡಿ, ಬುಡಕಟ್ಟು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ಹಾಗೂ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಹ ಕೆಲಸ ಆಗಬೇಕೆಂಬ ನಿಟ್ಟಿನಲ್ಲಿ ಸಮಸ್ಯೆಯೂ ಹಲವು ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದ್ದು, ಈ ನಿಟ್ಟಿನಲ್ಲಿ ಹಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಸ್ಥೆಯು ಮುಂದಾಗಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯು ಹಾಡಿ ಭಾಗಗಳಲ್ಲಿ ಇನ್ನಷ್ಟು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ಹಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಲಿದೆ ಎಂದರು.

ಟ್ರಸ್ಟಿನ ಕಾರ್ಯದರ್ಶಿ ಹರೀಶ್‌ಕುಮಾರ್ ಮಾತನಾಡಿ, ಈಗಾಗಲೇ ಸಂಸ್ಥೆಯು ಗೋಳೂರು ಹಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ತಾತ್ಕಾಲಿಕ ಹೆಚ್ಚುವರಿ ಕೊಠಡಿ ಹಾಗೂ ಇತರ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಾಡಿ ಭಾಗಗಳ ಶಾಲೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಇನ್ನಷ್ಟು ಆದ್ಯತೆ ನೀಡಲಾಗುವುದು ಎಂದರು.

ಸಂಸ್ಥೆಯ ನಿರ್ದೇಶಕರಾದ ಯೋಗ ಗುರು ಶೇಖರ್, ರಾಜೇಶ್, ಶಿವಪ್ರಸಾದ್, ಡಾ.ಪೂರ್ಣಿಮಾ, ಡಾ.ವಾಸುದೇವ ಸಿಂಗ್, ನವೀನ್, ಫೀಲ್ಡ್ ಆಫೀಸರ್ ಗೋವಿಂದರಾಜು, ಶಾಲೆಯ ಮುಖ್ಯಶಿಕ್ಷಕರಾದ ರಾಮಕೃಷ್ಣ, ಶಿಕ್ಷಕ ವರ್ಗದವರು, ವಿದ್ಯಾರ್ಥಿಗಳು, ಹಾಡಿ ನಿವಾಸಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net