ಆರ್ಥಿಕ ಸ್ವಾವಲಂಬನೆಗೆ ಸೌಲಭ್ಯ ಬಳಸಿಕೊಳ್ಳಲಿ: ಶಾಸಕ ರವಿಕುಮಾರ್ ಗಣಿಗ ಸಲಹೆ

Cooperative week Mandya
Published on

ಮಂಡ್ಯ: ರೈತರಿಗೆ ಅನುಕೂಲ ಮಾಡುವ ಉದ್ದೇಶದಿಂದ ಸಹಕಾರ ಕ್ಷೇತ್ರದಲ್ಲಿ ಹಲವು ಸೌಲಭ್ಯ ನೀಡಲಾಗುತ್ತಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ನಗರದ ರೈತ ಸಭಾಂಗಣದಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ, ಆರ್‌ಎಪಿಸಿಎಂಎಸ್ ಸಹಯೋಗದಲ್ಲಿ ಆಯೋಜಿಸಿದ್ದ 71ನೇ ಸಹಕಾರ ಸಪ್ತಾಹ-2024 ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ರೈತರು ತಮ್ಮ ಆರ್ಥಿಕ ಸ್ವಾವಲಂಬನೆಗಾಗಿ ಸಹಕಾರ ಸಂಘಗಳಲ್ಲಿ ಸಿಗುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಪ್ರಗತಿ ಸಾಧಿಸಬೇಕು. ಅದೇ ರೀತಿ ಅಧಿಕಾರಿಗಳು ರೈತರಿಗೆ ಅನುಕೂಲವಾಗುವಂತಹ ಯೋಜನೆ ಕಲ್ಪಿಸಿಕೊಡಬೇಕು ಎಂದರು.

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಿಇಒ ವನಜಾಕ್ಷಿ ಮಾತನಾಡಿ, ಸಹಕಾರ ಸಂಘಕ್ಕೆ ಕೊಡುಗೆ ನೀಡಿದ ಮಹನೀಯರನ್ನು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೆಕಿದೆ. ಸಹಕಾರ ಸಂಘಗಳು ರೈತರಿಗೆ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಹೊಂದಲು ನೆರವಾಗಿವೆ. ಸೊಸೈಟಿ, ಡೇರಿ ಗ್ರಾಮೀಣ ಭಾಗದಲ್ಲಿ ಸೇವೆ ನೀಡುತ್ತಿವೆ. ರೈತರು ಗೋದಾಮು ಕಟ್ಟಿಕೊಳ್ಳಲು ಶೇ.4 ರಷ್ಟು ಬಡ್ಡಿಯಲ್ಲಿ ಸಾಲಸೌಲಭ್ಯ ನೀಡಲಾಗುತ್ತಿದೆ ಎಂದರು.

ಸರ್ಕಾರದಲ್ಲಿ ನೀಡುವ ಸೌಲಭ್ಯವನ್ನು ಸಕಾಲದಲ್ಲಿ ಬಳಸಿಕೊಳ್ಳುವುದು ಸಂಘಗಳಿಗೆ ಮುಖ್ಯವಾಗಬೇಕು. ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಂಪ್ಯೂಟರಿಜೇಷನ್ ಅನ್ನು ಮಾಡಲಾಗಿದೆ. ಜತೆಗೆ ನ್ಯಾಷನಲ್ ಡೆಟಾಬೇಸ್ ಅನ್ನು ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಎಲ್ಲ ದತ್ತಾಂಶವನ್ನು ಒಂದೆಡೆ ಸಿಗುವ ಹಾಗೆ ಮಾಡುವುದೇ ಇದರ ಉದ್ದೇಶವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ನೀಡುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಕಾಡೇನಹಳ್ಳಿ ರಾಮಚಂದ್ರು ಮಾತನಾಡಿದರು. ಆರ್‌ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್, ಸಹಾಯಕ ಪ್ರಾಧ್ಯಾಪಕ ಎಂ.ಪುಟ್ಟಸ್ವಾಮಿಗೌಡ, ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿರ್ದೇಶಕ ಎಸ್.ಎಲ್.ಮೋಹನ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ್, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಜಿ.ಕೆ.ಶಿವಕುಮಾರ್, ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಅಧ್ಯಕ್ಷೆ ಎಚ್.ಸಿ.ಶಿವಲಿಂಗೇಗೌಡ, ಸಂಘದ ನಿರ್ದೇಶಕರಾದ ಬೇಲೂರು ಸೋಮಶೇಖರ್, ಬಿ.ಡಿ.ಪುರುಷೋತ್ತಮ್, ಹೇಮಲತಾ, ಕೆ.ಸಿ.ರವೀಂದ್ರ, ಅಂಜನಾ ಇದ್ದರು. ಇದೇ ವೇಳೆ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳವಳಿಯನ್ನು ಬಲಪಡಿಸುವ ವಿಚಾರವಾಗಿ ಉಪನ್ಯಾಸ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net