ಕರೊನಾ 2ನೇ ಅಲೆ ಎದುರಿಸುವ ಆತಂಕ ಸೃಷ್ಟಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

Rohini sinduri_DC_3
Published on

ಮೈಸೂರು: ಕಳೆದ ವರ್ಷ ಜುಲೈನಲ್ಲಿ ಮೈಸೂರು ನಗರದಲ್ಲಿ ಇದ್ದಂಥ ಕರೊನಾ ಪರಿಸ್ಥಿತಿ ಈಗ ಮತ್ತೆ ಮರುಕಳಿಸಿದ್ದು, ಸೋಂಕು ನಿಯಂತ್ರಣಕ್ಕೆ ಎಲ್ಲರೂ ಮುಂಜಾಗ್ರತೆ ವಹಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
2021ರ ಫೆಬ್ರವರಿ 26ರಿಂದ ಮಾರ್ಚ್ 4ರ ಅವಧಿಯಲ್ಲಿ ಮೈಸೂರಲ್ಲಿ 127 ಪ್ರಕರಣಗಳು ದಾಖಲಾಗಿದ್ದವು. ಮಾರ್ಚ್ 5ರಿಂದ ಮಾರ್ಚ್ 11ರ ಅವಧಿಯಲ್ಲಿ ಈ ಪ್ರಕರಣ 185ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಿದೆ ಎಂದು ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕು ಮತ್ತೆ ಹೆಚ್ಚಳವಾಗಿದ್ದು, ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇದರ ಜತೆಗೆ ಪಕ್ಕದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲೂ ಸೋಂಕು ಹೆಚ್ಚಾಗುವ ಭೀತಿ ಎದುರಾಗಿದ್ದು, ಎರಡನೇ ಅಲೆಯನ್ನು ಎದುರಿಸುವಂತಹ ಆತಂಕ ಸೃಷ್ಟಿಸಿದೆ ಎಂದು ಹೇಳಿದ್ದಾರೆ
ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ
ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು, ಈ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರು ಈ ಸಾಂಕ್ರಾಮಿಕವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ಲಕ್ಷಿಸದೆ, ನಿಯಮವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ತಿಳಿಸಿದ್ದಾರೆ
ಯಾವುದೇ ಜ್ವರ, ಕೆಮ್ಮು, ಶೀತ, ತಲೆನೋವಿನಂಥ ಕೋವಿಡ್ ರೋಗದ ಗುಣಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಅಲ್ಲದೆ, 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಹಾಗೂ ಯಾವುದಾದರೂ ದೀರ್ಘಕಾಲಿನ ಕಾಯಿಲೆಗಳಿಂದ ಬಳಲುತ್ತಿರುವ 45ರಿಂದ 60 ವರ್ಷ ವಯೋಮಾನದವರು ಕಡ್ಡಾಯವಾಗಿ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.
ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ, ದೇವಸ್ಥಾನಗಳಿಗೆ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಕರೊನಾ ಹರಡದಂತೆ ತಡೆಗಟ್ಟಲು ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಜಾರಿಮಾಡಿರುವ ಹೊಸ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ
ಮದುವೆ, ಸಭೆ ಸಮಾರಂಭಗಳು, ಜಾತ್ರೆ-ಉತ್ಸವಗಳು ಇಂಥ ಕಾರ್ಯಕ್ರಮಗಳಲ್ಲಿ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಾವಿರಾರು ಜನರು ಬಂದು-ಹೋಗುವುದರಿಂದ ಕೋವಿಡ್ ಬಹುಬೇಗ ವ್ಯಾಪಕವಾಗಿ ಹರಡುತ್ತದೆ. ಆದ್ದರಿಂದ ಇಂಥ ಜನಸಂದಣಿ ಪ್ರದೇಶಗಳಿಂದ ದೂರ ಇರಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ
ಕರ್ನಾಟಕದಲ್ಲಿ ಕಲಬುರಗಿ, ಬೀದರ್, ಮತ್ತು ಬೆಂಗಳೂರು ನಗರ ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ತುಂಬ ಏರುಗತಿಯಲ್ಲಿ ಇವೆ. ಮೈಸೂರಿಗೆ ಅಂಥ ಪರಿಸ್ಥಿತಿ ಬರದಂತೆ ನಿಯಂತ್ರಣ ಮಾಡುವುದಕ್ಕೆ ಸಾರ್ವಜನಿಕರ ಸಹಕಾರ ಬೇಕಾಗಿದೆ. ಪರಿಸ್ಥಿತಿ ಗಂಭೀರ ಹಂತ ತಲುಪುವ ಮೊದಲೇ ಸಾರ್ವಜನಿಕರು ಎಚ್ಚರಿಕೆ ವಹಿಸುವ ಮೂಲಕ ಸೋಂಕು ಹರಡದಂತೆ ತಡೆಗಟ್ಟಬೇಕಿದೆ ಎಂದರು.
ಮೈಸೂರಿನ ಪ್ರಜ್ಞಾವಂತ ನಾಗರಿಕರ ಸಹಕಾರದಿಂದ ಕಳೆದ ವರ್ಷ ಜಿಲ್ಲಾದ್ಯಂತ ಸೋಂಕು ನಿಯಂತ್ರಿಸಲು ಸಾಧ್ಯವಾಗಿತ್ತು. ಅದರಂತೆ ಈ ಬಾರಿಯೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಸರ್ಕಾರ ಇತ್ತೀಚಿಗೆ ಹೊರಡಿಸಿದ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಸಹಕಾರ ನೀಡುವಂತೆ ಎಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net