

ಚನ್ನರಾಯಪಟ್ಟಣ: ಸಮುದಾಯಗಳ ನಿಗಮ ಮಂಡಳಿಗಳು ಅನುದಾನದ ಕೊರತೆಯಿಂದ ನಿಷ್ಪ್ರಯೋಜಕವಾಗಿವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಗುರುವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ತಾಲೂಕು ವಾಲ್ಮೀಕಿ ನಾಯಕ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಮಾತನಾಡಿದರು.
ಹಿಂದುಳಿದ ಸಮುದಾಯದ ಜನರನ್ನು ಮೇಲೆತ್ತಬೇಕು ಎನ್ನುವ ಸಲುವಾಗಿ ಸರ್ಕಾರಗಳು ನಿರಂತರ ಹೋರಾಟ ಮಾಡಿಕೊಂಡೇ ಬರುತ್ತಿವೆ. ಅದಕ್ಕಾಗಿ ನಿಗಮ ಮಂಡಳಿಗಳನ್ನು ರಚನೆ ಮಾಡಿದ್ದು, ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆ ಇದ್ದು, ಸರ್ಕಾರದಿಂದ ಇನ್ನಷ್ಟು ಅನುದಾನದ ಅಗತ್ಯವಿದೆ ಎಂದರು.
ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ. ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ರಾಮಾಯಣ ಮಹಾಕಾವ್ಯ ಮತ್ತು ಅದರ ಕರ್ತೃ ಮಹರ್ಷಿ ವಾಲ್ಮೀಕಿಯು ಅನಾದಿಕಾಲದಿಂದ ವರ್ತಮಾನದವರೆಗೂ ನಿರಂತರವಾಗಿ ಅಪಾರ ಜನಪ್ರಿಯತೆಯನ್ನು ಹೊಂದಿದ್ದು ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಅವರ ತತ್ವ-ಆದರ್ಶಗಳನ್ನು ಪಾಲಿಸಬೇಕೆಂದರು.
ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಮೀಸಲಾತಿ ಬೇಡಿಕೆ, ಆತ್ಮಗೌರವ, ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಮುಖ್ಯ ಪಾತ್ರ ವಹಿಸಿದ್ದರು ಎಂದು ಶ್ಲಾಘಿಸಿದರು.
ತಾಲೂಕಿನ ವಾಲ್ಮೀಕಿ ಸಂಘದ ಕಾರ್ಯಚಟುವಟಿಕೆಗೆ ಅನುಕೂಲವಾಗಲೆಂದು ಭವನ ನಿರ್ಮಾಣಕ್ಕೆ ಸೂಕ್ತ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಡಾ.ಎನ್.ಚಂದ್ರಶೇಖರ್ ಮಹರ್ಷಿ ವಾಲ್ಮೀಕಿ ಅವರ ಜೀವನ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಹಸೀಲ್ದಾರ್ ವಿ.ಎಸ್.ನವೀನ್‌ಕುಮಾರ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗಿರೀಶ್‌ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಉಮಾಶಂಕರ್, ಡಿವೈಎಸ್ಪಿ ಪಿ.ರವಿಪ್ರಸಾದ್, ಪುರಸಭಾ ಅಧ್ಯಕ್ಷೆ ಕೆ.ಎನ್.ಬನಶಂಕರಿ ರಘು, ಉಪಾಧ್ಯಕ್ಷೆ ರಾಣೆಕೃಷ್ಣ, ಪುರಸಭಾ ಮುಖ್ಯ ಅಧಿಕಾರಿ ಕೆ.ಎನ್.ಹೇಮಂತ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ಎಚ್.ಎನ್.ಸತೀಶ್, ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಎನ್.ವೆಂಕಟೇಶ್, ಯೋಜನಾ ಆಯೋಗದ ನಿರ್ದೇಶಕ ಜಿ.ಆರ್.ಮೂರ್ತಿ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಆರ್.ಸುರೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎನ್.ಸತೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಮಂಜಪ್ಪ, ತಾಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎಸ್.ಆರ್.ವಿನಯ್ ದೀಪು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ್ ವಾಲ್ಮೀಕಿ, ಸಮಾಜದ ಮುಖಂಡರು, ಪದಾಧಿಕಾರಿಗಳು ಸಮಿತಿ ಸದಸ್ಯರು ಹಾಗೂ ಪುರಸಭೆ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.