ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ಎಐಡಿಎಸ್‌ಒ ನೇತೃತ್ವ ಬೃಹತ್ ಪ್ರತಿಭಟನೆ

AIDSO PROTEST NEET
ವಿಜಯಪುರ ಜಿಲ್ಲಾಡಳಿತ ಕಚೇರಿ ಎದುರು ಎಐಡಿಎಸ್‌ಒ ನೇತೃತ್ವ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸುಭಾಷ ಬೆಟ್ಟದಕೊಪ್ಪ, ಕಾವೇರಿ ರಜಪೂತ, ಶಿಲ್ಪಾ ಬಿ.ಕೆ ಮತ್ತಿತರರಿದ್ದಾರೆ.
Published on

ವಿಜಯಪುರ: ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರ ತೀವ್ರ ಖಂಡನೀಯ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ನೀಟ್ ಪರೀಕ್ಷೆಯಲ್ಲಾದ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಖಜಾಂಚಿ ಸುಭಾಷ ಬೆಟ್ಟದಕೊಪ್ಪ ಮಾತನಾಡಿ, ಜೂ. 4 ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಸಿ ನೀಡಿದೆ. ಆದರೆ ಹೆಚ್ಚುವರಿ ಅಂಕಗಳು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂಬ ಆರೋಪವಿದೆ. ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷೆ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಇದರ ಕುರಿತು ಸೂಕ್ತ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ಈ ಮುಂಚೆ ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ ಎಂದು ನಾವು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ನಮ್ಮ ಎಚ್ಚರಿಕೆಯು ಇಂದು ನಿಜವಾಗಿದೆ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಅಮಾಯಕ ವಿದ್ಯಾರ್ಥಿಗಳು ಬಲಿಪಶುಗಳಾಗಿದ್ದಾರೆ. ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಶಿಲ್ಪಾ ಬಿ.ಕೆ, ನೇತ್ರಾವತಿ ಶಹಾಪುರ ಸೇರಿದಂತೆ ಹಲವು ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net