

ಚಿಕ್ಕಮಗಳೂರು: ಸುಗ್ರೀವಾಜ್ಞೆ ಮೂಲಕ ರೈತ, ಕಾರ್ವಿುಕ ವಿರೋಧಿ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಧೋರಣೆ ಖಂಡಿಸಿ ವಿವಿಧ ಪಕ್ಷ, ಸಂಘಟನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಅಮ್ಜದ್ ಮಾತನಾಡಿ, ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿರ್ದೇಶನ ನೀಡುವ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ವಿರುದ್ಧವಾಗಿ ಆಡಳಿತ ನಡೆಸುತ್ತಿದೆ ಎಂದು ದೂರಿದರು.
ರೈತರಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ಜಾರಿ ಮಾಡಿ ಲೋಕಸಭೆಯಲ್ಲೂ ರೈತರಿಗೆ ಮರಣ ಶಾಸನ ಬರೆದಿಟ್ಟಿದೆ. ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುತ್ತಿರುವ ಬಿಜೆಪಿ ಸರ್ಕಾರ, ಹಂತ ಹಂತವಾಗಿ ಪ್ರಜಾತಂತ್ರ ವ್ಯವಸ್ಥೆಯನ್ನು ಸರ್ವಾಧಿಕಾರಿ ಆಡಳಿತದತ್ತ ಕೊಂಡೊಯ್ಯುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ರವೀಶ್ ಕ್ಯಾತನಬೀಡು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾವನೆಗಳ ಮೂಲಕ ಮನುಷ್ಯರ ಬದುಕನ್ನು ಕಸಿಯುತ್ತಿದ್ದಾರೆ. ರೈತರ ಬದುಕು ಕಸಿದು ಶ್ರೀಮಂತರ ಹೊಟ್ಟೆ ತುಂಬಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕೃಷಿಕನನ್ನು ಕಡೆಗಣಿಸುವ ದೇಶ ಎಂದಿಗೂ ಅಭಿವೃದ್ಧಿಯಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.