ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಹಿರಿದು

Kushtagi Labor Day
ಕುಷ್ಟಗಿಯಲ್ಲಿ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸ್ಥಳೀಯ ಕೋರ್ಟ್‌ನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ ಶನಿವಾರ ಉದ್ಘಾಟಿಸಿದರು.
Published on

ಕುಷ್ಟಗಿ: ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಹಿರಿದಾಗಿದೆ ಎಂದು ಪಟ್ಟಣದ ಜೆಎಂಎಫ್‌ಸಿ ಕೋರ್ಟ್‌ನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ ಹೇಳಿದರು.

ಕಾರ್ಮಿಕ ದಿನಾಚರಣೆ ನಿಮಿತ್ತ ಕಾನೂನು ಸೇವಾಸಮಿತಿ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಪಟ್ಟಣದ ಕೋರ್ಟ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕರಿಗಾಗುತ್ತಿರುವ ಅನ್ಯಾಯಗಳ ಕಾರಣದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಾಂತಿಗಳಾದವು. ಅದರ ಫಲವಾಗಿ ಕಾರ್ಮಿಕ ಕಲ್ಯಾಣ ಯೋಜನೆಗಳು ಹಾಗೂ ಕಾನೂನುಗಳು ಜಾರಿಯಾದವು. ಕಾರ್ಮಿಕರು ಕಾನೂನುಗಳ ಹಾಗೂ ಸೌಲಭ್ಯಗಳ ಕುರಿತು ತಿಳಿವಳಿಕೆ ಹೊಂದಿ ಸದುಪಯೋಗ ಪಡೆಯಬೇಕಿದೆ ಎಂದರು.

ಕಾರ್ಮಿಕ ನಿರೀಕ್ಷಕ ಶಿವಶಂಕರ ತಳವಾರ ಮಾತನಾಡಿ, ಕಟ್ಟಡ ಕಾರ್ಮಿಕರು ಕಾರ್ಮಿಕ ಕಾರ್ಡ್ ಹೊಂದಿ ವಿವಿಧ ಸೌಲಭ್ಯ ಪಡೆಯಬೇಕಿದೆ. ಅಸಂಘಟಿತ ಕಾರ್ಮಿಕರು ಈ ಶ್ರಮ ಕಾರ್ಡ್ ಪಡೆಯಬೇಕಿದೆ ಎಂದರು.

ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಮೈನುದ್ದೀನ್ ಮಾತನಾಡಿ, ಕಾರ್ಮಿಕರಲ್ಲದ ಅನೇಕರು ಕಾರ್ಡ್ ಪಡೆದು ಯೋಜನೆ ಲಾಭ ಪಡೆಯುತ್ತಿದ್ದಾರೆ. ಯೋಜನೆಯ ಪ್ರಯೋಜನ ಅರ್ಹರಿಗೆ ಸಿಗಬೇಕು.

ಈ ಸಂಬಂಧ ಸೂಕ್ತ ಪರಿಶೀಲನೆ ನಡೆಸಿ ಕಾರ್ಡ್ ವಿತರಿಸುವ ಕಾರ್ಯವನ್ನು ಇಲಾಖೆ ಮಾಡಬೇಕಿದೆ ಎಂದರು. ವಕೀಲರ ಸಂಘದ ಅಧ್ಯಕ್ಷ ವಿಜಯಮಹಾಂತೇಶ ಕುಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕ ಎಲ್.ರಾಯನಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net