ಮಾತೃ ಇಲಾಖೆಗೆ ಸಿಬ್ಬಂದಿ ವಾಪಸ್ ಕಳುಹಿಸುವ ಸಂಬಂಧ ಕ್ರಮ ಕೈಗೊಳ್ಳಿ; ಹೈಕೋರ್ಟ್ ನಿರ್ದೇಶನ

bbmp
Published on

ಬೆಂಗಳೂರು: ಎರವಲು ಸೇವೆಯ ಆಧಾರದಲ್ಲಿ ಅನೇಕ ವರ್ಷಗಳಿಂದ ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಂಟಿ ಆಯುಕ್ತರು, ಉಪ ಆಯುಕ್ತರು, ಹಿರಿಯ ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸುವ ಸಂಬಂಧ 8 ವಾರಗಳಲ್ಲಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ. ಅಮೃತ್​ರಾಜ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಸುಜಾತ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಎರವಲು ಅಧಿಕಾರಿಗಳನ್ನು ಅವರ ಮಾತೃ ಇಲಾಖೆಗೆ ವಾಪಸ್ ಕಳುಹಿಸುವ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ 8 ವಾರಗಳಲ್ಲಿ ಕ್ರಮ ಕೈಗೊಳ್ಳುವಂತೆ ಪಾಲಿಕೆ ಹಾಗೂ ಸರ್ಕಾರಕ್ಕೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಮನವಿ ಏನು?: ವಿವಿಧ ಇಲಾಖೆಗಳಿಂದ ಎರವಲು ಸೇವೆಯಲ್ಲಿ ಬಂದು ಹತ್ತಾರು ವರ್ಷಗಳಿಂದ ಅವಧಿ ಮೀರಿ ಕರ್ತವ್ಯ ನಿರ್ವಹಿಸುತ್ತಿರುವ ಜಂಟಿ ಆಯುಕ್ತರು, ಉಪ ಆಯುಕ್ತರನ್ನು ಅವರ ಮಾತೃ ಇಲಾಖೆಗೆ ವಾಪಸ್ ಕಳುಹಿಸಬೇಕು. ಆ ಜಾಗಕ್ಕೆ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಅದೇ ರೀತಿ ಎರವಲು ಸೇವೆಯಲ್ಲಿರುವ ಹಿರಿಯ ಮತ್ತು ಕಿರಿಯ ಅರೋಗ್ಯ ಪರಿವೀಕ್ಷಕರನ್ನು ಮಾತೃ ಇಲಾಖೆಗೆ ಹಿಂದಿರುಗಿಸಬೇಕು. ಈ ಕುರಿತು 2019ರ ಮೇ 22ರಂದು ನೀಡಿರುವ ಮನವಿಯನ್ನು ಪರಿಗಣಿಸುವಂತೆ ಪಾಲಿಕೆಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net