

ಬೆಂಗಳೂರು: ರಾಜ್ಯದಲ್ಲಿ ಗುರುವಾರ 42 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 148 ತಲುಪಿದೆ. ಸೋಂಕಿನಿಂದ 70 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಕೋವಿಡ್ ವೈರಾಣು ಪತ್ತೆ ಸಂಬಂಧ ಕಳೆದ 24 ಗಂಟೆಗಳಲ್ಲಿ 513 ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ. 8.18 ವರದಿಯಾಗಿದೆ. ಸಕ್ರಿಯ ಪ್ರಕರಣಗಳಲ್ಲಿ 139 ಮಂದಿ ಮನೆ ಆರೈಕೆಯಲ್ಲಿದ್ದಾರೆ. ಉಳಿದಂತೆ 9 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದರೊಂದಿಗೆ ಈವರೆಗೂ 253 ಮಂದಿ ಕೋವಿಡ್ ನಿಂದ ಬಳಲಿದ್ದು, 103ಮಂದಿ ಚೇತರಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ 70 ವರ್ಷದ ವೃದ್ಧ, ಕಳೆದ ಸೋಮವಾರ (ಮೇ 26) ನರದಲ್ಲಿ ಸೆಳತದ ಸಮಸ್ಯೆಯಿಂದ ಪ್ರಜ್ಞಾಹೀನರಾಗಿದ್ದರು. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಆಮ್ಲಜನಕದ ಪ್ರಮಾಣ ಕಡಿಮೆ (ಶೇ. 88) ಇದ್ದಿದ್ದರಿಂದ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.