ಕೋವಿಡ್: ಅಗತ್ಯ ಮುನ್ನೆಚ್ಚರ ವಹಿಸಿ: ಡಾ.ಎನ್.ವಿ.ಪ್ರಸಾದ್

covid
Published on

ಮಡಿಕೇರಿ: ಜಿಲ್ಲೆಯ ನೆರೆ ರಾಜ್ಯದಲ್ಲಿ ಕೋವಿಡ್-೧೯ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸುವುದರ ಜತೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸಲಹೆ ಮಾಡಿದರು.


ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.


ನೆರೆಯ ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ಏರಿಕೆಯಾಗುವುದರಿಂದ ಜಿಲ್ಲೆಯಲ್ಲಿಯೂ ಸಹ ಅಗತ್ಯ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಗ್ರಾಮದ ಗಡಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದರ ಜತೆಗೆ ಅಗತ್ಯ ತಪಾಸಣೆ ಕೈಗೊಳ್ಳುವಂತೆ ತಿಳಿಸಿದರು.


ನೆರೆಯ ರಾಜ್ಯ ಮಾತ್ರವಲ್ಲದೆ ವಿವಿಧ ಕಡೆಗಳಲ್ಲಿ ಜೆಎನ್.೧ ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ. ಆದರೆ, ಆತಂಕ ಪಡುವ ಅಗತ್ಯವಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರ ವಹಿಸಬೇಕಿದೆ. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್‌ಒಗೆ ಡಾ.ಪ್ರಸಾದ್ ಸೂಚಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲೆಯ ಗಡಿ ಪ್ರದೇಶದಲ್ಲಿ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.


ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್, ಹಾಸಿಗೆ, ಔಷಧಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಶಕ್ತಿ ಯೋಜನೆಯಡಿ ಜಿಲ್ಲೆಗೆ ಹೊಸ ಬಸ್‌ಗಳು ಶೀಘ್ರ ಬರಲಿದ್ದು, ಈಗಾಗಲೇ ಬಸ್ ಖರೀದಿಗೆ ಮುಂದಾಗಿದೆ. ಯಾವ ಯಾವ ಊರುಗಳಿಗೆ ಬಸ್ ಅಗತ್ಯವಿದೆ. ಅಲ್ಲಿಗೆ ಬಸ್ ಸೌಲಭ್ಯ ಕಲ್ಪಿಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಗಮನಹರಿಸಬೇಕು ಎಂದರು.


ಅನ್ನಭಾಗ್ಯ ಯೋಜನೆಯಡಿ ಸರ್ಕಾರದ ನಿಯಮದಂತೆ ಪಡಿತರ ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಹಾರ ಇಲಾಖೆ ಅಧಿಕಾರಿಗೆ ಸೂಚಿಸಿದರು. ಬಿಪಿಎಲ್, ಅಂತ್ಯೋದಯ ಅನ್ನಭಾಗ್ಯ ಯೋಜನೆ ಹೀಗೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದರು.


ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತೀ ಯೂನಿಟ್ ಸದಸ್ಯರಿಗೆ ೫ ಕೆ.ಜಿ ಅಕ್ಕಿಯಂತೆ ಉಚಿತವಾಗಿ ವಿತರಿಸಲಾಗುತ್ತಿದೆ. ಹಾಗೂ ಆದ್ಯತಾ(ಎಎವೈ) ಪಡಿತರ ಚೀಟಿದಾರರಿಗೆ ಪ್ರತೀ ಪಡಿತರ ಚೀಟಿಗೆ ೩೫ ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಆಹಾರ ಇಲಾಖೆಯ ಕಿರಣ್ ಮಾಹಿತಿ ನೀಡಿದರು.


ಕೊಡಗು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ೧.೩೧ ಲಕ್ಷ ಮಹಿಳೆಯರು ಹೆಸರು ನೋಂದಾಯಿಸುವ ಗುರಿ ಇದ್ದು, ಇವರಲ್ಲಿ ಈಗಾಗಲೇ ೧.೧೩ ಲಕ್ಷ ಮಹಿಳೆಯರು ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ ೧೮ ಸಾವಿರ ಕುಟುಂಬದ ಮಹಿಳೆಯರು ಹೆಸರು ನೋಂದಾಯಿಸಲು ಬಾಕಿ ಇದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ನವೆಂಬರ್‌ವರೆಗೆ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿದೆ. ತಾಂತ್ರಿಕ ಸಮಸ್ಯೆಯಿಂದ ೫ ಸಾವಿರ ಮಂದಿಗೆ ಹಣ ಜಮೆ ಆಗಲು ಬಾಕಿ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಖೆಯ ಉಪ ನಿರ್ದೇಶಕ ನಟರಾಜು ಮಾಹಿತಿ ನೀಡಿದರು.


ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಗಮನಹರಿಸುವಂತೆ ಸ್ಥಳೀಯ ಸಂಸ್ಥೆಗಳು ಹಾಗೂ ತಹಶೀಲ್ದಾರರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದರು. ಈ ಬಗ್ಗೆ ತಹಶೀಲ್ದಾರರಾದ ಪ್ರವೀಣ್ ಕುಮಾರ್, ಪ್ರಶಾಂತ್, ಕಿರಣ್ ಗೌರಯ್ಯ, ರಾಮಚಂದ್ರ, ಎಸ್.ಎನ್.ನರಗುಂದ ಮಾಹಿತಿ ನೀಡಿದರು.


ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಾ.ಪಂ.ಇಒಗಳಾದ ಶೇಖರ್, ಅಪ್ಪಣ್ಣ, ಜಯಣ್ಣ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net