

ಗುಂಡ್ಲುಪೇಟೆ: ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಇತ್ತೀಚೆಗೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.
ಬಂಡೀಪುರ ಹುಲಿ ಯೋಜನೆಯ ಕುಂದಕೆರೆ ವಲಯದ ಕಾಡಂಚಿನ ಗ್ರಾಮದ ಗವಿಸ್ವಾಮಿ ಅವರ ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ಏಕಾಏಕಿ ದಾಳಿ ನಡೆಸಿದೆ. ಅಕ್ಕಪಕ್ಕದ ಗ್ರಾಮಗಳ ರೈತರು ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಹುಲಿ ಕಾಡಿನತ್ತ ಓಡಿಹೋಗಿದೆ. ಘಟನೆಯಲ್ಲಿ ಕುತ್ತಿಗೆಯ ಬಳಿ ತೀವ್ರವಾಗಿ ಗಾಯಗೊಂಡು ರಕ್ತಸ್ರಾವದಿಂದ ಹಸು ಸಾವಿಗೀಡಾಗಿದೆ. ಸ್ಥಳಕ್ಕೆ ಕುಂದಕೆರೆ ವಲಯದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮಹಜರು ನಡೆಸಿದರು. ಜಾನುವಾರು ಸಾವಿಗೆ ಪರಿಹಾರ ಕೊಡುವ ಭರವಸೆ ನೀಡಿದರು.
ತಾಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆಗಳು ದಾಳಿ ನಡೆಸಿ ಜಾನುವಾರುಗಳನ್ನು ಕೊಲ್ಲುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಳೆದ ಹದಿನೈದು ದಿನಗಳಿಂದ ಮೂರು ಹಸುಗಳನ್ನು ಕೊಂದುಹಾಕಿವೆ. ಎರಡು ವರ್ಷಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಚಿರತೆಗಳ ಹಾವಳಿ ಮಿತಿಮೀರಿದ್ದು ಸಾಕುಪ್ರಾಣಿಗಳನ್ನು ಕೊಲ್ಲುತ್ತಿವೆ. ವನ್ಯಜೀವಿಗಳ ಸೆರೆಗೆ ಅರಣ್ಯ ಇಲಾಖೆ ಬೋನು ಅಳವಡಿಸಿದ್ದರೂ, ಕೇವಲ ಎರಡು ಚಿರತೆಗಳು ಸೆರೆಯಾಗಿವೆ. ಆದರೆ ಹುಲಿ ಮತ್ತು ಮತ್ತೊಂದು ಚಿರತೆ ಬೋನಿನತ್ತ ಸುಳಿಯದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿವೆ. ಇದರಿಂದ ರೈತರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿ ಹುಲಿಯನ್ನು ಕಾಡಿಗಟ್ಟಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.