

ಗದಗ: ಜಿಲ್ಲೆಯಲ್ಲಿ ಜಾನುವಾರುಗಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗದಂತೆ ಮುಂಜಾಗ್ರತಾ ಕ್ರಮವಾಗಿ ಸೆ.26 ರಿಂದ ಅಕ್ಟೋಬರ್ 25 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ರೈತರು ಜಾನುವಾರುಗಳಿಗೆ ತಪ್ಪದೇ ಲಸಿಕಾ ಹಾಕಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಡಳಿತ ಭವನದ ಕೋರ್ಟ್ ಹಾಲನಲ್ಲಿ ಶುಕ್ರವಾರದಂದು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 4ನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ನಿರ್ವಹಣಾ ಸಮಿತಿಯ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ರೈತರು ಮೇವುಗಳನ್ನು ಸಂರಕ್ಷಿಸಿಟ್ಟುಕೊಳ್ಳಬೇಕು. ಅವರು ತಿಳಿಸಿದರು.
ಕಾಲುಬಾಯಿ, ಬೇನೆ ಲಸಿಕೆ ಹಾಕಿಸಲು ಜಾನುವಾರು ಮಾಲೀಕರು ತಮ್ಮಲ್ಲಿರುವ ತಪ್ಪು ಕಲ್ಪನೆಗಳನ್ನು ಬದಿಗೊತ್ತಿ, ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಕಾಲುಬಾಯಿ - ಬೇನೆ ಲಸಿಕಾ ಕಾರ್ಯಕ್ರಮಕ್ಕೆ ಪಶು ಇಲಾಖೆಗೆ ಜೊತೆಗೆ ಗದಗ ಹಾಲು ಒಕ್ಕೂಟ ವ್ಯಾಪ್ತಿಯ ಸಿಬ್ಬಂದಿಗಳು ಹಾಗೂ ಸ್ಥಳೀಯ ಸಂಸ್ಥೆಯವರು ಸಮನ್ವಯದಿಂದ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರೈತರಿಗೆ ಲಸಿಕಾ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಬಿತ್ತಿಪತ್ರ ಬಿಡುಗಡೆ ಮಾಡಲಾಯಿತು.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎಚ್.ಬಿ.ಹುಲಗಣ್ಣವರ ಅವರು ಮಾತನಾಡಿ, ಸೆ.26 ರಿಂದ ಅಕ್ಟೋಬರ್ 25 ರವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ ಅಂದಾಜು 192109 ಜಾನುವಾರುಗಳಿದ್ದು, 4ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮನೆ ಬಾಗಿಲಿಗೆ ಹೋಗಿ ಕಾಲುಬಾಯಿ ಲಸಿಕೆ ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರತಿ ತಾಲೂಕಿನಲ್ಲಿ ಲಸಿಕಾ ವೇಳಾ ಪಟ್ಟಿ ಮತ್ತು ಜಾನುವಾರು ಹೊಂದಿರುವ ರೈತರ ಮಾಹಿತಿಯನ್ನು ಗ್ರಾಮವಾರು ತಯಾರಿಸಲಾಗಿದೆ. ಗ್ರಾಮಗಳ ಹೆಸರು, ಜಾನುವಾರುಗಳ ಸಂಖ್ಯೆ, ಜಾನುವಾರು ಮಾಲೀಕರ ಹೆಸರು, ಮೊಬೈಲ್ ಸಂಖ್ಯೆ, ಆಧಾರ ಸಂಖ್ಯೆ, ಲಸಿಕಾದಾರರ ವಿವರ ಹಾಗೂ ಜಾನುವಾರುವಿನ ಕಿವಿ ಓಲೆ, ಸಂಖ್ಯೆ ವಿವರಗಳನ್ನು ಲಭ್ಯವಿರುತ್ತವೆ. ಪ್ರತಿ ಗ್ರಾಮ ಅಥವಾ ನಗರ ಪ್ರದೇಶ 100 ರಿಂದ 120 ಜಾನುವಾರುಗಳಿಗೆ ಒಂದು ಬ್ಲಾಕ್ ಎಂದು ವರ್ಗೀಕರಿಸಿ ಒಟ್ಟು 2598 ಬ್ಲಾಕ್‍ಗಳಲ್ಲಿ ಲಸಿಕಾದಾರರು ಲಸಿಕೆ ಹಾಕಲಿದ್ದಾರೆ. ಜಿಲ್ಲೆಗೆ ಸರಬರಾಜಾದಂತಹ ಪೆÇೀಸ್ಟರ್, ಬ್ಯಾನರ್‍ಗಳನ್ನು ಹಾಗೂ ಅವಶ್ಯವಿರುವ ತುರ್ತು ಔಷಧಿ ಮತ್ತು ರಾಸಾಯನಿಕಗಳನ್ನು ಹಂಚಿಕೆ ಮಾಡಿ ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ತಯಾರು ಮಾಡಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು, ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಎಲ್ಲಾ ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.