ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಡಾ.ಆನಂದ.ಕೆ

CHAILD MARREGE MEETING DC
ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳ ಸಭೆ ನಡೆಸಿದರು. ಎಸ್‌ಪಿ ಲಕ್ಷ್ಮಣ ನಿಂಬರಗಿ, ಅರವಿಂದ ಹಾಗರಗಿ ಇದ್ದಾರೆ.
Published on

ವಿಜಯಪುರ: ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಬಾಲ್ಯ ವಿವಾಹ ನಿಷೇಧ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005, ನಿಯಮ 2006 ಹಾಗೂ ಪೋಕ್ಸೊ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.

ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸಂಬಂಧಿಸಿದ ಇಲಾಖೆಗಳು ನಿರಂತರ ಸಭೆ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ಸೂಕ್ತ ಕಾನೂನು ಅರಿವು ಮತ್ತು ತಿಳಿವಳಿಕೆ ಮೂಡಿಸಬೇಕು. ಈ ವಿಷಯದಲ್ಲಿ ತುಂಬಾ ಗಂಭೀರತೆಯಿಂದ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

ಬಾಲ್ಯವಿವಾಹ ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದ್ದು, ಸಮನ್ವಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ಸಂಬಂಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ಧ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದರು.

ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದರ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬಂದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಮುಂಜಾಗ್ರತೆವಹಿಸಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಕೇಂದ್ರಗಳಲ್ಲಿ ಪೋಕ್ಸೊ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕೊಳಗಾದವರನ್ನು ಕೌನ್ಸೆಲಿಂಗ್ ಪ್ರಕ್ರಿಯೆಗೆ ಒಳಪಡಿಸಿ, ಅವರ ಮನೋಸ್ಥೈರ್ಯ ಹೆಚ್ಚಿಸಬೇಕು. ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ವೈದ್ಯರು, ಪೊಲೀಸ್ ಇಲಾಖೆ ಸಹಕಾರ ಒದಗಿಸಬೇಕು. ಸಂಬಂಧಿಸಿದ ಸಂತ್ರಸ್ತರ ಕುರಿತ ವಸ್ತುಸ್ಥಿತಿ ಆಗಾಗ ವರದಿ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯವಿವಾಹದಂಥ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದ್ದು, ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಎಎಸ್‌ಪಿ ಶಂಕರ ಮಾರಿಹಾಳ, ಜಿಪಂ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವಾಣ್, ಡಿಎಚ್‌ಒ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net